ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್‌ಗಳಿಗಾಗಿ ಸ್ವೀಕರಿಸಿರುವ ಅರ್ಜಿಗಳ ತ್ವರಿತ ವಿಲೇವಾರಿ ಸಂಬಂಧ ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹಾಗೂ ನಗರದ ಶಾಸಕರ ಜತೆ ಸೋಮವಾರ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿನ ವಿಳಂಬ, ಅಧಿಕಾರಿಗಳ ನಿರ್ಲಕ್ಷ್ಯ, ಸಮನ್ವಯತೆ ಕೊರತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಜಾರ್ಜ್, ಆದಷ್ಟು ಬೇಗ ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.ಬಿಬಿಎಂಪಿ ವ್ಯಾಪ್ತಿಯಲ್ಲಿ 1.5 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದು, ಪರಿಶೀಲನೆ ಕಾರ್ಯ ಆಗಿಲ್ಲ. ಸಂಬಂಧ ಪಟ್ಟ ಇಲಾಖೆಗಳು ಸಮನ್ವಯತೆಯಿಂದ ಈ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಆನ್‌ಲೈನ್ ಮೂಲಕ ಅರ್ಜಿ ಹಾಕಿದ ಹದಿನೈದು ದಿನಗಳಲ್ಲಿ ಕಾರ್ಡ್ ಸಿಗಲಿದೆ. ಮನೆ ಬಾಗಿಲಿಗೆ ಕಾರ್ಡ್ ತಲುಪಿಸುವುದಾಗಿ ಹೇಳಿ ಕಾರ್ಡ್ ವಿತರಣೆ ತಡವಾದರೆ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುವುದು ಹೇಗೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್‌ಗಳಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಹಾಗೂ ಪಾಲಿಕೆ ಸದಸ್ಯರು ನಗರ ಉಸ್ತುವಾರಿ ಸಚಿವರೂ ಆಗಿರುವ ಜಾರ್ಜ್ ಅವರಲ್ಲಿ ದೂರಿದ್ದರು.
ಹೀಗಾಗಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿ ಆದಷ್ಟು ಬೇಗ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು ಎಂದು ಹೇಳಲಾಗಿದೆ. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಕೃಷ್ಣಪ್ಪ, ಶಾಸಕರಾದ ದಿನೇಶ್‌ಗುಂಡೂರಾವ್, ಮುನಿರತ್ನ ಸಭೆಯಲ್ಲಿ ಭಾಗವಹಿಸಿದ್ದರು.