ಚಿಕ್ಕಬಳ್ಳಾಪುರ: ಕೋವಿಡ್-19 ಕಾರಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯವಗಿದ್ದು, ಜೂ. 25 ರೊಳಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಅಗಸ, ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ನೀಡಲು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 150 ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನುಸ್ವೀಕರಿಸಲಾಗುತ್ತದೆ ಎಂದರು.
ಕುಟುಂಬಕ್ಕೆ ಒಬ್ಬರಿಗೆ: ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಧನ ಪಡೆಯಲು ಅರ್ಹರಾಗಿರುತ್ತಾ ರೆ ಹಾಗೂ ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ ಎಂದರು. ಫಲಾನುಭವಿಗಳು ಸಲ್ಲಿಸುವ ಎಲ್ಲಾ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅಪ್ ಲೋಡ್ ಮಾಡಲಾಗುವುದು ಫಲಾನುಭವಿಗಳಿಗೆ ಪರಿಹಾರಧನ ಕಡ್ಡಾಯವಾಗಿ ಆಧಾರ್ ಆಧಾರಿತ ಡಿಬಿಟಿ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ ಕೆ-2 ಮೂಲಕ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕ್ಷೌರಿಕರು 1,123, ಅಗಸರಿಂದ 1,122 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಪಂನ ಯೋಜನಾ ನಿರ್ದೇಶಕರಾ ದ ಗಿರಿಜಾ ಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.