Advertisement

ಇನ್ನು ಮುಂದೆ ಬ್ರಾಹ್ಮಣರಿಗೂ ಸಿಗಲಿದೆ ಜಾತಿ ಪ್ರಮಾಣ ಪತ್ರ: ಸಚಿವ ಆರ್. ಅಶೋಕ್ ಮಾಹಿತಿ

09:56 PM Jul 15, 2020 | Hari Prasad |

ಮೈಸೂರು: ಕೇಂದ್ರ ಸರಕಾರ ಶೇ.10ರಷ್ಟು ಜನರಲ್ ಮೀಸಲಾತಿಯನ್ನು ಘೋಷಿಸಿದ್ದು ಈ ಸೌಲಭ್ಯವನ್ನು ಪಡೆದುಕೊಳ್ಳಲು ಬ್ರಾಹ್ಮಣರಿಗೆ ಇದುವರೆಗ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಿಗದಿದ್ದುದು ದೊಡ್ಡ ಅಡ್ಡಿಯಾಗಿತ್ತು.

Advertisement

ಆದರೆ ಇದೀಗ ರಾಜ್ಯ ಸರಕಾರವು ಈ ಅಡ್ಡಿಯನ್ನು ನಿವಾರಿಸಿದೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸಿದೆ.

ಬ್ರಾಹ್ಮಣ ಮಹಾಸಭಾ ಹಾಗೂ ಸಮಾಜದ ಮುಖಂಡರ ಬೇಡಿಕೆಯನ್ನು ಮನ್ನಿಸಿ ಇದೀಗ ಈ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ನಿಯಮಗಳನ್ನು ರೂಪಿಸಿಲಾಗಿದೆ ಎಂಬ ಮಾಹಿತಿಯನ್ನು ಕಂದಾಯ ಸಚಿವ ಆರ್. ಅಶೋಕ್ ಅವರು ನೀಡಿದ್ದಾರೆ.

ಬ್ರಾಹ್ಮಣರಿಗೂ ಜಾತಿ  ಪ್ರಮಾಣ ಪತ್ರ ನೀಡಬೇಕೆಂದು ಶಾಸಕ ಎಸ್.ಎ.ರಾಮದಾಸ್, ಬ್ರಾಹ್ಮಣ ಮಹಾಸಭಾ ಸೇರಿದಂತೆ ಹಲವರು ರಾಜ್ಯ ಸರಕಾರಕ್ಕೆ ಬೇಡಿಕೆಯನ್ನು ಸಲ್ಲಿಸಿದ್ದರು.

Advertisement

ಕೇಂದ್ರ ಸರ್ಕಾರ ಶೇ.10ರಷ್ಟು ಜನರಲ್ ಮೀಸಲಾತಿ ನೀಡಿದೆ ಮತ್ತು ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರ ನಿಗಮ ಸ್ಥಾಪನೆ ಮಾಡಿತ್ತು ಆದರೆ ಈ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸೌಲಭ್ಯವೇ ಇರಲಿಲ್ಲ ಹೀಗಾಗಿ ಬ್ರಾಹ್ಮಣ ಸಮುದಾಯದಲ್ಲಿರುವ ಫಲಾನುಭವಿಗಳನ್ನು ಗುರುತಿಸುವುದು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬ್ರಾಹ್ಮಣರಿಗೂ ಜಾತಿ ಪ್ರಮಾಣ ಪತ್ರ ನೀಡಲು ನಿರ್ಧರಿಸಲಾಗಿದೆ.

ಕಂದಾಯ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಇದನ್ನು ಜಾರಿಗೊಳಿಸಲು ಆದೇಶ ಕೊಟ್ಟಿದ್ದು, ಸದ್ಯಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಕೋವಿಡ್ 19 ವಾರಿಯರ್​ಗಳಾಗಿ ಕೆಲಸ ಮಾಡುತ್ತಿದ್ದಾರೆ. ಇದೆಲ್ಲವೂ ಬಗೆಹರಿದ ಬಳಿಕ ಬ್ರಾಹ್ಮಣರಿಗೂ ತಮ್ಮ ಜಾತಿ ಹೆಸರಿನಲ್ಲಿ ಪ್ರಮಾಣ ಪತ್ರ ದೊರೆಯಲಿದೆ ಎಂದು ಸಚಿವ ಆರ್ ಅಶೋಕ್ ಅವರು ಮೈಸೂರಿನಲ್ಲಿ ಇಂದು ಮಾಹಿತಿ ನೀಡಿದ್ದಾರೆ.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ : ಉಪ ಮುಖ್ಯಮಂತ್ರಿ  ಗೋವಿಂದ ಕಾರಜೋಳ
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ
ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ  ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಟಿಯಿಂದ ಆದೇಶ ಹೊರಡಿಸಿತ್ತು.

ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ.

ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next