Advertisement

ಕಪ್ಪು ಬಾವುಟ ಪ್ರದರ್ಶನಕ್ಕೆ ಬ್ರೇಕ್‌

12:27 PM Feb 05, 2018 | |

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಹೋರಾಟಗಾರರ ಪ್ರಯತ್ನಕ್ಕೆ ಆರಂಭದಲ್ಲೇ ಬ್ರೇಕ್‌ ಬಿತ್ತು.

Advertisement

ಮಹದಾಯಿ ವಿವಾದ ಇತ್ಯರ್ಥಕ್ಕೆ ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶಿಸಲು ಮೆರವಣಿಗೆಯಲ್ಲಿ ಹೊರಟ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡಪರ ಹೋರಾಟಗಾರರಾದ ಕೆ.ಆರ್‌ ಕುಮಾರ್‌, ಪ್ರವೀಣ್‌ಕುಮಾರ್‌ ಶೆಟ್ಟಿ ಸೇರಿ ನೂರಾರು ಕಾರ್ಯಕರ್ತರನ್ನು ಸ್ವಾತಂತ್ರ್ಯ ಉದ್ಯಾನವನದಲ್ಲೇ ಪೊಲೀಸರು ವಶಕ್ಕೆ ಪಡೆದರು. 

ಇದಕ್ಕೂ ಮುನ್ನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕನ್ನಡಪರ ಒಕ್ಕೂಟ, ಜನ ಸಾಮಾನ್ಯರ ಪಕ್ಷ, ಉತ್ತರ ಕರ್ನಾಟಕ ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಡೀ ದಿನ “ಕರಾಳ ದಿನಾಚರಣೆ’ ಆಚರಿಸಿದರು. ಕಪ್ಪು ಬಾವುಟ, ಕಪ್ಪುಪಟ್ಟಿ, ಕಪ್ಪುಬಟ್ಟೆ ಧರಿಸಿ ಧರಣಿ ನಡೆಸಿದ ಹೋರಾಟಗಾರರು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮೋದಿ ಅವರು ರಾಜ್ಯಕ್ಕೆ 7 ಬಾರಿ ಭೇಟಿ ನೀಡಿದ್ದರೂ ಮಹದಾಯಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಗಮನ ಹರಿಸದೆ ತಾರತಮ್ಯವೆಸಗಿ¨ªಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ, ಸಣ್ಣಪುಟ್ಟ ವಿಚಾರಗಳ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಮಾತನಾಡುವ ಪ್ರಧಾನಿ, ಮಹದಾಯಿ ವಿಚಾರದಲ್ಲಿ “ಮೌನಿ ಬಾಬಾ’ ಆಗಿದ್ದಾರೆ ಎಂದು ಟೀಕಿಸಿದರು.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನಿಯವರು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದ ಇತ್ಯರ್ಥಕ್ಕೆ ಮುಂದಾಗಬೇಕು. ರಾಜ್ಯದ ಜ್ವಲಂತ ಸಮಸ್ಯೆಯಾದ ಮಹದಾಯಿ ಬಗ್ಗೆ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗದಿದ್ದರೆ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳೊಂದಿಗೆ ಚರ್ಚಿಸಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

Advertisement

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮಾತನಾಡಿ, ರಾಜ್ಯ ಬಿಜೆಪಿ ನಾಯಕರಿಗೆ ನಾಲಿಗೆ ಭದ್ರವಿಲ್ಲ. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಪ್ರತಿ ವಿಚಾರದಲ್ಲೂ ಮಧ್ಯಪ್ರವೇಶಿಸುವ ಅವರನ್ನು ನಿಮ್ಹಾನ್ಸ್‌ ಆಸ್ಪತ್ರೆಗೆ ಸೇರಿಸಬೇಕು ಎಂದರು.

ಕೇಂದ್ರ ಸರಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಕುಡಿಯುವ ನೀರು ಸೇರಿದಂತೆ ಯಾವುದೇ ಜನಪರ ಯೋಜನೆಗಳನ್ನು ಪ್ರಕಟಿಸಿಲ್ಲ. ಅಲ್ಲದೆ, ಮಹದಾಯಿ ವಿವಾದ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಕರ್ನಾಟಕ ಬಂದ್‌ ನಡೆಸಿದ್ದರೂ, ಪ್ರಧಾನಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ. ಅಲ್ಲದೆ, ಬೆಂಗಳೂರು ಬಂದ್‌ ನಡೆಸುವ ಬಗ್ಗೆಯೂ ಕೆಲವರು ತಡೆಯೊಡ್ಡಿದರು ಎಂದು  ಆರೋಪಿಸಿದರು. 

ಮೋದಿ ಅಣುಕು ಶವಯಾತ್ರೆ: ಹೋರಾಟಗಾರರು, ಮಹದಾಯಿ ವಿಚಾರದ ಬಗ್ಗೆ ಮೋದಿ ಮಾತನಾಡಬಹುದೆಂದು ಮೊದಲು ಅವರ ಸಂಪೂರ್ಣ ಭಾಷಣ ಆಲಿಸಿದರು. ಆದರೆ, ಎಲ್ಲಿಯೂ ಮಹದಾಯಿ ವಿಚಾರ ಪ್ರಸ್ತಾಪಿಸದಿದ್ದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಮೋದಿ ಅವರ “ಅಣುಕು ಶವಯಾತ್ರೆ’ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next