ಮಂಗಳೂರು: ಕಾರ್ಖಾನೆಗಳ ಮಾಲಕರಿಂದ ಲಂಚ ಪಡೆದ ಪ್ರಕರಣದಲ್ಲಿ ಕಾರ್ಖಾನೆಗಳ ಸಹಾಯಕ ನಿರ್ದೇಶಕನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಮಂಗಳೂರಿನ ಕೊಟ್ಟಾರದಲ್ಲಿರುವ ಕಾರ್ಖಾನೆಗಳ ಸಹಾಯಕ ನಿರ್ದೇಶಕರ ಕಚೇರಿ ಉಪವಿಭಾಗ-2ರಲ್ಲಿ ಕಾರ್ಖಾನೆಗಳ ಸಹಾಯಕ ನಿರ್ದೇಶಕರಾಗಿದ್ದು ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಎಚ್.ಸುರೇಶ್ ಶಿಕ್ಷೆಗೊಳಗಾದವರು.
ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಕಾರ್ಖಾನೆಗಳ ಪರವಾನಿಗೆ ನೀಡುವುದು, ಪರವಾನಿಗೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡುವುದು ಮೊದಲಾದ ಕೆಲಸಗಳನ್ನು ನಿರ್ವಹಿಸಲು ಕಾರ್ಖಾನೆಗಳ ಮಾಲಕರಿಂದ ಲಂಚ ಪಡೆಯುತ್ತಿದ್ದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ಪೊಲೀಸ್ ಠಾಣೆಯಲ್ಲಿ 2016ರ ನ.30ರಂದು ಪ್ರಕರಣ ದಾಖಲಾಗಿ ದಾಳಿ ನಡೆಸಲಾಗಿತ್ತು. ಆ ವೇಳೆ 3,49, 515 ರೂ. ಪತ್ತೆಯಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಡಿ.3ರಂದು ಆರೋಪಿ ಎಚ್.ಸುರೇಶ್‌ಗೆ 4 ವರ್ಷಗಳ ಸಾದಾ ಸಜೆ ಹಾಗೂ 4 ಲ.ರೂ. ದಂಡ, ಒಂದು ವೇಳೆ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಎಸಿಬಿ ಮಂಗಳೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.