ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಉತ್ತಮ ತೇಜಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 81 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 52.41 ಅಂಕಗಳ ಮುನ್ನಡೆಯೊಂದಿಗೆ 31,363.98 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.25 ಅಂಕಗಳ ಮುನ್ನಡೆಯೊಂದಿಗೆ 9,671.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕಿನ ಹಿರಿಯ ಅಧಿಕಾರಿಯೋರ್ವರು ಅಮೆರಿಕದ ಆರ್ಥಿಕತೆ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ಹೇಳಿದ ಕಾರಣ ನಿನ್ನೆ ಸೋಮವಾರ ವಾಲ್ ಸ್ಟ್ರೀಟ್ ದಾಖಲೆಯ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತ್ತು. ಇದುವೇ ಇಂದು ಏಶ್ಯನ್ ಶೇರು ಪೇಟೆಗಳಲ್ಲಿ ತೇಜಿ ಕಂಡುಬರಲು ಕಾರಣವಾಗಿತ್ತು.
ನಿನ್ನೆ ಸೋಮವಾರದ ವಹಿವಾಟನ್ನು ಸೆನ್ಸೆಕ್ಸ್ 255.17 ಅಂಕಗಳ ಉತ್ತಮ ಏರಿಕೆಯೊಂದಿಗೆ ಕೊನೆಗೊಳಿಸಿತ್ತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಟಾಟಾ ಮೋಟರ್, ಇನ್‌ಫೋಸಿಸ್, ಪವರ್‌ಗ್ರಿಡ್, ಟಾಟಾ ಸ್ಟೀಲ್, ರಿಲಯನ್ಸ್ ಮತ್ತು ಓಎನ್‌ಜಿಸಿ ಶೇರುಗಳು ಶೇ.1.45ರಷ್ಟು ಏರಿದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಜಪಾನಿನ ನಿಕ್ಕಿ ಶೇ.1.10, ಹಾಂಕಾಂಗ್‌ನ ಹ್ಯಾಂಗ್‌ಸೆಂಗ್ ಶೇ.0.40, ಶಾಂಘೈ ಕಾಂಪೋಸಿಟ್ ಇಂಡೆಕ್ಸ್ ಶೇ.0.04ರಷ್ಟು ಏರಿರುವುದು ಗಮನಾರ್ಹವಾಗಿತ್ತು.