ಮುಂಬಯಿ : ದಿನಪೂರ್ತಿ ನಡೆದ ಹಾವು – ಏಣಿ ಆಟದ ವಹಿವಾಟಿನಲ್ಲಿ ಸೆನ್ಸೆಕ್ಸ್ ಕೊನೆಗೂ 83 ಅಂಕಗಳ ಜಿಗಿತವನ್ನು ಸಾಧಿಸಿ ಇಂದು ಶುಕ್ರವಾರದ ವಹಿವಾಟನ್ನು 35,657.86 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸಮರ ಸಾಗುತ್ತಿರುವುದನ್ನು ಎಚ್ಚರಿಕೆಯಿಂದ ಗಮನಿಸಿರುವ ವಹಿವಾಟುದಾರರ ನಡೆಯಲ್ಲಿ ಏಶ್ಯನ್ ಮಾರುಕಟ್ಟೆಗಳಲ್ಲಿ ಸ್ವಲ್ಪಮಟ್ಟಿನ ತೇಜಿ ಕಂಡುಬಂತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 22.90 ಅಂಕಗಳ ಏರಿಕೆಯನ್ನು ಸಾಧಿಸಿ ದಿನದ ವಹಿವಾಟನ್ನು 10,772.65 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಈ ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಅನುಕ್ರಮವಾಗಿ 234.38 ಅಂಕ ಮತ್ತು 58.35 ಅಂಕಗಳ ಮುನ್ನಡೆಯನ್ನು ದಾಖಲಿಸಿವೆ.
ನಿನ್ನೆ ಗುರುವಾರ ವಿದೇಶಿ ಹೂಡಿಕೆದಾರ ಸಂಸ್ಥೆಗಳು 159.37 ಕೋಟಿ ರೂ. ಶೇರುಗಳನ್ನು ಮಾರಿದ್ದವು; ಅಂತೆಯೇ ದೇಶೀಯ ಹೂಡಿಕೆದಾರ ಸಂಸ್ಥೆಗಳು 296.97 ಕೋಟಿ ಶೇರುಗಳನ್ನು ಮಾರಿದ್ದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,781 ಶೇರುಗಳು ವಹಿವಾಟಿಗೆ ಒಳಪಟ್ಟವು; 1,451 ಶೇರುಗಳು ಮುನ್ನಡೆ ಸಾಧಿಸಿದವು; 1,188 ಶೇರುಗಳು ಹಿನ್ನಡೆಗೆ ಗುರಿಯಾದವು; 142 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.