ಮುಂಬಯಿ : ಡಾಲರ್ ಎದುರು ರೂಪಾಯಿ ದುರ್ಬಲಗೊಂಡಿರುವುದು ಮತ್ತು ಅಮೆರಿಕ-ಚೀನ ನಡುವೆ ಮುಂದುವರಿದಿರುವ ವಾಣಿಜ್ಯ ಸಮರದ ಕಾರಣಕ್ಕೆ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ದುರ್ಬಲ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 219 ಅಂಕಗಳ ನಷ್ಟದೊಂದಿಗೆ 35,470.35 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 59.40 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು10,762.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಹೂಡಿಕೆದಾರರು ಹಾಗೂ ವಹಿವಾಟುದಾರರಿಂದ ನಡೆದಿರುವ ಲಾಭ ನಗದೀಕರಣದ ಶೇರು ಮಾರಾಟವೇ ಸೆನ್ಸೆಕ್ಸ್, ನಿಫ್ಟಿ ಕುಸಿತಕ್ಕೆ ಕಾರಣವಾಗಿದೆ.
ಕಳೆದ ಶುಕ್ರವಾರ ವಿದೇಶಿ ಹೂಡಿಕೆದಾರರು 1,343.44 ಕೋಟಿ ರೂ. ಶೇರುಗಳನ್ನು ಮಾರಿದ್ದಾರೆ; ವ್ಯತಿರಿಕ್ತವಾಗಿ ದೇಶೀಯ ಹೂಡಿಕೆದಾರ ಸಂಸ್ಥೆಗಳು 1,105.76 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದಾರೆ.
ಇಂದು ಮುಂಬಯಿ ಶೇರು ಪೇಟೆಯಲ್ಲಿ 2,747 ಶೇರುಗಳು ವಹಿವಾಟಿಗೆ ಒಳಪಟ್ಟವು; 858 ಶೇರುಗಳು ಮುನ್ನಡೆ ಕಂಡವು; 1,729 ಶೇರುಗಳು ಹಿನ್ನಡೆಗೆ ಗುರಿಯಾದವು; 160 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.