ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಭೇಟಿಯ ನಂತರ ಹೇಳಿಕೆ ನೀಡಿದ ಬಿಎಸ್ ಯಡಿಯೂರಪ್ಪ ಅವರು, ಪ್ರಧಾನಿ ಜತೆ 20 ನಿಮಿಷಗಳ ಕಾಲ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಬರುತ್ತಿದ್ದಾರೆ ಲಕ್ಷಕ್ಕೂ ಹೆಚ್ಚು ಜನರು ಸೇರಿ ದೊಡ್ಡ ಕಾರ್ಯಕ್ರಮ ಮಾಡಲಿದ್ದೆವೆ ಎಂದರು.
ರಾಜ್ಯದಲ್ಲಿ ಪಕ್ಷಸಂಘಟನೆಗೆ ಪ್ರವಾಸಮಾಡಲು ಅನುಮತಿ ಪಡೆಯುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈಗ ಆ ಪ್ರಶ್ನೆಯೇ ಉದ್ಬವ ಆಗುವುದಿಲ್ಲ. ಈಗಾಗಲೇ ಪ್ರವಾಸಮಾಡಲು ನಿರ್ಧಾರವಾಗಿದೆ. ನಾನು, ಬೊಮ್ಮಾಯಿ ಸೇರಿದಂತೆ ಎಲ್ಲಾ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದೇವೆ ಎಂದರು.
ಮಂಗಳೂರು ಪ್ರವಾಸವಲ್ಲದೇ ಮತ್ತೆ ಮತ್ತೆ ಕರ್ನಾಟಕಕ್ಕೆ ಬರಬೇಕು.ಕರ್ನಾಟಕದ ಕುರಿತಾಗಿ ಹೆಚ್ಚು ಸಮಯ ಮೀಸಲಿಡಬೇಕು ಎಂದು ಬಿಎಸ್ ವೈ ಅವರು ಪ್ರಧಾನಿ ಬಳಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ನವದೆಹಲಿಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪಕ್ಷದ ಸಂಸದೀಯ ಮಂಡಳಿಯಲ್ಲಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಸಂಸದೀಯ ಮಂಡಳಿಗೆ ಆಯ್ಕೆಯಾದ ಬಳಿಕ ಯಡಿಯೂರಪ್ಪ ಅವರು ಹೊಸ ಹುರುಪು ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಚುನಾವಣೆ ಎದುರಿಸಲು ಕೈಗೊಳ್ಳಬೇಕಾದ ರಣತಂತ್ರಗಳ ಕುರಿತು ಬಿಜೆಪಿಯ ಹಿರಿಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.