Advertisement

ಒಗ್ಗಟ್ಟಿನ ಮಂತ್ರ ಬೋಧಿಸಿದ ಮೋದಿ; ಹೈಕಮಾಂಡ್‌ ನಾಯಕರ ಭೇಟಿ ಮಾಡಿದ ಬಿಎಸ್‌ವೈ

10:58 PM Aug 26, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಒಂದು ವರ್ಷದ ನಂತರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ಅವರಿಗೆ ಒಗ್ಗಟ್ಟಿನ ಮಂತ್ರ ಪಠಿಸುವಂತೆ ಸೂಚಿಸಿದ್ದಾರೆ.

Advertisement

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ದೆಹಲಿಗೆ ತೆರಳಿ ಹೈಕಮಾಂಡ್‌ ಭೇಟಿ ಮಾಡದೇ ಅಂತರ ಕಾಯ್ದುಕೊಂಡಿದ್ದ ಯಡಿಯೂರಪ್ಪ, ತಮ್ಮನ್ನು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ನೇಮಕ ಮಾಡಿದ್ದರಿಂದ ಹೈಕಮಾಂಡ್‌ ನಾಯಕರಿಗೆ ಅಭಿನಂದನೆ ಸಲ್ಲಿಸಲು ದೆಹಲಿಗೆ ತೆರಳಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಪ್ರವಾಸದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಜೊತೆಗೆ ಯಡಿಯೂರಪ್ಪ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದು, ಪ್ರಮುಖವಾಗಿ ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಯಡಿಯೂರಪ್ಪ ಅವರಿಗೆ ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ರಾಜ್ಯದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಯಡಿಯೂರಪ್ಪ ಅವರೂ ಕೂಡ ಪ್ರಧಾನಿ ಮೋದಿಗೆ ಚುನಾವಣೆವರೆಗೂ ಕರ್ನಾಟಕ ಪ್ರವಾಸಕ್ಕೆ ಹೆಚ್ಚಿನ ಸಮಯ ಮೀಸಲಿಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸೆ. 2 ಕ್ಕೆ ಪ್ರಧಾನಿ ರಾಜ್ಯದ ಮಂಗಳೂರಿಗೆ ಪ್ರವಾಸ ಕೈಗೊಳ್ಳುತ್ತಿದ್ದು, ಅದರ ಮುಂದುವರೆದ ಭಾಗವಾಗಿ ಮೇಲಿಂದ ಮೇಲೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ವಿವಿಧ ತಂಡಗಳಲ್ಲಿ ಪ್ರವಾಸ ಮಾಡುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆಯ ಕುರಿತಂತೆಯೂ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೋದಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್‌ ಯಡಿಯೂರಪ್ಪ, ಪ್ರಧಾನಿ ಜೊತೆ 20 ನಿಮೀಷಗಳ ಕಾಲ ಚರ್ಚೆ ಮಾಡಿದ್ದೇನೆ . 20 ನಿಮಿಷಗಳ ಕಾಲ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಿತು. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ 2 ನೇ ತಾರೀಖಿನಂದು ಮಂಗಳೂರಿಗೆ ಬರುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರಿ ದೊಡ್ಡ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರವಾಸಮಾಡಲು ಅನುಮತಿ ಪಡೆಯುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಕೈಗೊಳ್ಳಲು ಈಗ ಅನುಮತಿ ಪಡೆಯುವ ಪ್ರಶ್ನೆಯೆ ಉದ್ಬವ ಆಗುವುದಿಲ್ಲ. ಈಗಾಗಲೇ ಪ್ರವಾಸ ಮಾಡಲು ನಿರ್ಧಾರವಾಗಿದೆ. ನಾನು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ನಾಯಕರು ರಾಜ್ಯ ಪ್ರವಾಸಮಾಡಲಿದ್ದೇವೆ ಎಂದು ಹೇಳಿದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಹೈಕೋರ್ಟಿನ ಆದೇಶ ಸ್ವಾಗತಾರ್ಹ. ಗಣಪತಿ ಹಬ್ಬ ಮಾಡುವುದು ಎಲ್ಲರನ್ನೂ ಒಗ್ಗೂಡಿಸುವ ಸಲುವಾಗಿ ಅನಗತ್ಯವಾಗಿ ಕೆಲವರು ಗೊಂದಲ ಮಾಡುತ್ತಿದ್ದಾರೆ. ಅದಕ್ಕೆ ಅರ್ಥ ಇಲ್ಲ. ಶಾಂತ ರೀತಿಯಲ್ಲಿ ಹಬ್ಬ ಆಚರಿಸಬೇಕು. ಆ ಜಾಗ ಈ ಜಾಗ ಅಂತಾ ಬಡಿದಾಡುವುದರಲ್ಲಿ ಅರ್ಥ ಇಲ್ಲ. ಹೈಕೋರ್ಟ್‌ ಒಳ್ಳೆಯ ತೀರ್ಮಾನ ತೆಗೆದುಕೊಂಡಿದೆ.
-ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next