Advertisement

10 ಸಾವಿರ ಕೋಟಿ ನೆರವಿಗೆ ಕೇಂದ್ರಕ್ಕೆ ಬಿಎಸ್‌ವೈ ಪ್ರಸ್ತಾವನೆ

11:57 PM Aug 12, 2019 | Lakshmi GovindaRaj |

ರಾಯಚೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ನೆರೆ ಪ್ರವಾಹದಿಂದ 30-40 ಸಾವಿರ ಕೋಟಿ ಹಾನಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು 10 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ತಿಳಿಸಿದರು. ಜೇಗರಕಲ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಈಗಾಗಲೇ ಮುಖ್ಯಮಂತ್ರಿಯವರು ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡುತ್ತಿದ್ದಾರೆ. ತಕ್ಷಣಕ್ಕೆ ನೆರೆ ಪರಿಹಾರ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 100 ಕೋಟಿ ಹಾಗೂ ಕೇಂದ್ರ ಸರ್ಕಾರದಿಂದ 126 ಕೋಟಿ ರೂ.ಬಿಡುಗಡೆಯಾಗಿದೆ. ಅದರ ಜತೆ ಕೂಡಲೇ 3,000 ಕೋಟಿ ರೂ.ಬಿಡುಗಡೆ ಮಾಡುವಂತೆಯೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಳಿ ಸಿಎಂ ಕೋರಿದ್ದಾರೆ ಎಂದು ತಿಳಿಸಿದರು.

ಶಾಶ್ವತ ಪರಿಹಾರಕ್ಕೆ ಕ್ರಮ: ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌ ಸೇರಿ ಅನೇಕ ಸಚಿವರು ನೆರೆ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಗತ್ಯ ಅನುದಾನ ಬಿಡುಗಡೆ ಮಾಡುವ ವಿಶ್ವಾಸ ವಿದೆ. ತಾವೂ ಸೇರಿದಂತೆ ಪಕ್ಷದ ಎಲ್ಲ ನಾಯಕರು ಈಗಾಗಲೇ ವಿವಿಧ ತಂಡಗಳಾಗಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇವೆ. ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಕಳಪೆ ಕಾಮಗಾರಿ ಗಮನಕ್ಕೆ: 2009ರಲ್ಲಿ ಇಂಥದ್ದೇ ಸ್ಥಿತಿ ನಿರ್ಮಾಣವಾದಾಗ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಸಂತ್ರಸ್ತರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರು. ಈ ವೇಳೆ ಕೆಲ ಏಜೆನ್ಸಿಗಳು ಕಳಪೆ ಕಾಮಗಾರಿ ಮಾಡಿದ್ದು ಗಮನಕ್ಕೆ ಬಂದಿವೆ. ಆದರೆ, ಈ ಬಾರಿ ಆ ತಪ್ಪು ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next