ಬೆಂಗಳೂರು: ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಂಡು ಪತನವಾಗುವ ಹಂತಕ್ಕೆ ತಲುಪಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮೂರ್‍ನಾಲ್ಕು ದಿನದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು ನಿರ್ಧರಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಯಡಿಯೂರಪ್ಪ, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿದ್ಯಮಾನಗಳಾಗಿದ್ದು, ಈ ಬಗ್ಗೆ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಲು ಮೂರ್‍ನಾಲ್ಕು ದಿನದಲ್ಲೇ ದೆಹಲಿಗೆ ಹೋಗಲಿದ್ದೇನೆ. ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಅವರು ಆಗಮಿಸಿದ್ದು, ಸಲಹೆ, ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.
ರಾಜೀನಾಮೆ ಸಲ್ಲಿಸಿರುವ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಹೂಡಿರುವ ಅರ್ಜಿ ಗುರುವಾರ ವಿಚಾರಣೆಗೆ ಬರಲಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಕಾದು ನೋಡಲಾಗುವುದು. ಎರಡು- ಮೂರು ದಿನದಲ್ಲಿ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಮೂಡಿದೆ. ರಾಜಕೀಯ ಬೆಳವಣಿಗೆ ಗಮನಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಶಾಸಕರಿಗೆ ರಕ್ಷಣೆ ಇಲ್ಲ ಹಾಗೂ ರಾಜೀನಾಮೆ ನೀಡಿರುವ ಶಾಸಕರ ಮೇಲೆ ದೌರ್ಜನ್ಯ ನಡೆಯುತ್ತಿರುವ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರಲಾಗಿದೆ. ಆದರೆ ಕೆಲ ಗಂಟೆಗಳಲ್ಲೇ ಶಾಸಕ ಡಾ.ಸುಧಾಕರ್ ಮೇಲೆ ವಿಧಾನಸೌಧದಲ್ಲೇ ಹಲ್ಲೆ ನಡೆದಿದೆ. ಸ್ವತಃ ಸಚಿವರು, ಶಾಸಕರೇ ಸುಧಾಕರ್ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದಾರೆ.
ಜತೆಗೆ ಸಚಿವ ಕೆ.ಜೆ.ಜಾರ್ಜ್ ಅವರ ಕೊಠಡಿಯಲ್ಲಿ ಕೂಡಿ ಹಾಕಿ ಗೂಂಡಾಗಿರಿ ನಡೆಸಿದ್ದಾರೆ. ಮೈತ್ರಿ ಸರ್ಕಾರ ಪತನದ ಕೊನೆಯ ಹಂತಕ್ಕೆ ಬಂದಿದ್ದು, ಕಾದು ನೋಡೋಣ. ಶುಕ್ರವಾರ ಅಧಿವೇಶನವಿದ್ದು, ಗುರುವಾರವೂ ಶಾಸಕಾಂಗ ಪಕ್ಷದ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದರು.
ಸ್ಪೀಕರ್‌ರೊಂದಿಗೆ ಒಂದು ಗಂಟೆ ಕಾಲ ಚರ್ಚಿಸಲಾಗಿದೆ. ಶಾಸಕರು ಸಲ್ಲಿಸಿರುವ ರಾಜೀನಾಮೆ ಅಂಗೀಕರಿಸದೆ ವಿಳಂಬ ಮಾಡುವುದು ಸರಿಯಾದ ಕ್ರಮವಲ್ಲ. ಕೂಡಲೇ ರಾಜೀನಾಮೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.