ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ, ಮುಂದೆ ಕೈಗೊಳ್ಳಬಹುದಾದದ ಕಾರ್ಯಗಳು ಮತ್ತು ಲಾಕ್ ಡೌನ್ ಕುರಿತಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆಯ್ದ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದರು.
ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಈ ಸಭೆಯಲ್ಲಿ ಸೂಚಿಸಲಾಯಿತು. ಕಂಟೇನ್ ಮೆಂಟ್ ಝೋನ್ ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಸೂಚಿಸಲಾಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಲಾಯಿತು.
ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು. ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲು ಎಂದು ತೀರ್ಮಾನಿಸಲಾಗಿದೆ,