Advertisement

ವರುಣಾದಲ್ಲಿ ಬಿಎಸ್‌ವೈ ಪುತ್ರನ ಸ್ಪರ್ಧೆ ಅಂತಿಮವಾಗಿಲ್ಲ

12:40 PM Mar 28, 2018 | Team Udayavani |

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಎದುರಾಳಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬುದು ವದಂತಿಯಷ್ಟೇ. ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಕ್ಷೇತ್ರ ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.

Advertisement

ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಬಹಳಷ್ಟು ಟಿಕೆಟ್‌ ಆಕಾಂಕ್ಷಿಗಳಿದ್ದೇವೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎನ್ನುವ ಕಾರಣಕ್ಕೆ ವಿಜಯೇಂದ್ರ ಅವರಿಗೆ ಟಿಕೆಟ್‌ ನೀಡಿದರೆ ಸ್ವಾಗತಿಸುತ್ತೇವೆ. ಆದರೆ, ಈವರೆಗೆ ಪಕ್ಷದೊಳಗೆ ಅಂತಹ ಬೆಳವಣಿಗೆ ನಡೆದಿಲ್ಲ ಎಂದು ಕ್ಷೇತ್ರದ ಬಿಜೆಪಿ ಮುಖಂಡರಾದ ಜಿಪಂ ಮಾಜಿ ಅಧ್ಯಕ್ಷ ಕೆ.ಎನ್‌.ಪುಟ್ಟಬುದ್ದಿ ತಿಳಿಸಿದರು.

ಯಾರೆ ಅಭ್ಯರ್ಥಿಯಾದರು ಗೆಲುವಿಗೆ ಶ್ರಮ: ಕಳೆದ ಆರು ತಿಂಗಳಿಂದ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಪರ ಪ್ರಚಾರ ನಡೆಸಿದ್ದೇವೆ. ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳು, ಸಿದ್ದರಾಮಯ್ಯ ಜನವಿರೋಧಿ ಆಡಳಿತ, ಯಡಿಯೂರಪ್ಪ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳ ಬಗ್ಗೆ ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಕ್ಷೇತ್ರದ ಮತದಾರರು ಬಿಜೆಪಿ ಪರ ಒಲವು ತೋರಿದ್ದಾರೆ. ಅಂತಿಮವಾಗಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ವೀರಶೈವ-ಲಿಂಗಾಯತ ಬೇರೆ ಬೇರೆಯಲ್ಲ. ಆದರೆ, ಕೇವಲ ಅವರ ವೈಯಕ್ತಿಕ ಹಿತಾಸಕ್ತಿಗಾಗಿ ಯಡಿಯೂರಪ್ಪ ಅವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದರು. ಪಕ್ಷದ ಮುಖಂಡರಾದ ಕಾ.ಪು.ಸಿದ್ದಲಿಂಗಸ್ವಾಮಿ, ಎಸ್‌.ಡಿ.ಮಹೇಂದ್ರ, ಆಶೋಕ್‌, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಜಿಪಂ ಸದಸ್ಯ ಗುರುಸ್ವಾಮಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next