ವಿಧಾನಪರಿಷತ್ತು: ಮುಂದಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುದಾನ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ, ಕಲ್ಯಾಣ ಕರ್ನಾಟಕದ ಕಲಬುರಗಿ ಮತ್ತು ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಪರಿಗಣಿಸಿಲ್ಲವೇಕೆ ಎಂದು ಪ್ರಶ್ನಿಸಿದ್ದಕ್ಕೆ ಸಚಿವರು ಉತ್ತರಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡುತ್ತದೆ. ದೇಶದಲ್ಲಿ 100 ನಗರಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ರಾಜ್ಯದ 7 ಏಳು ನಗರಗಳಿವೆ. ಅದಾಗ್ಯೂ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಬಳ್ಳಾರಿ ನಗರ ಸೇರಿದಂತೆ ವಿಜಯಪುರ, ಮೈಸೂರು ನಗರಗಳನ್ನು ಸ್ಮಾರ್ಟ್ ಸಿಟಿ ಅಭಿಯಾನದಡಿ ಪರಿಗಣಿಸಿ ಪ್ರತಿ ನಗರಕ್ಕೆ ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಜ್ಯದಿಂದ ಹೆಚ್ಚುವರಿ ನಗರಗಳ ಸೇರ್ಪಡೆಗೆ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡಲು ಸರಕಾರಕ್ಕೆ ಮನವಿ
ಅದರಂತೆ, ಈ ನಾಲ್ಕು ನಗರಗಳಿಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲು ಆದ್ಯತೆ ನೀಡಲಾಗುವುದು. ಮುಖ್ಯವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು. ಈ ಬಗ್ಗೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕುಂಠಿತಗೊಂಡಿದ್ದವು. ಅದಾಗ್ಯೂ ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಗತಿಯಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 7ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.