ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಿಟಿ ಪ್ರಾದೇಶಿಕ ಸಮಿತಿಯ ವತಿಯಿಂದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಸಹಯೋಗದೊಂದಿಗೆ ಕುರ್ಲಾ ಪೂರ್ವದ ಬಂಟರ ಭವನದ ಮುಕ್ತಾನಂದ ಸಭಾಗೃಹದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ನಿರ್ದೇಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಸಿಟಿ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರದಲ್ಲಿ ಗುರುತಿಸಿದ ಸದಸ್ಯರಿಗೆ ಕನ್ನಡಕವನ್ನು ವಿತರಿಸಲಾಯಿತು.
ಪದಾಧಿಕಾರಿಗಳು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಚಿತಾ ಶೆಟ್ಟಿ ಅವರು ಪ್ರಾರ್ಥನೆಗೈದರು.
ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಇತ್ತೀಚೆಗೆ ನಡೆದ ಆದರ್ಶ ದಂಪತಿ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ವಿಜೇತರಾದ ಶಿಬರೂರು ಸುರೇಶ್ ಶೆಟ್ಟಿ ದಂಪತಿಯನ್ನು ಅಭಿನಂದಿಸಿ ಗೌರವಿಸಲಾಯಿತು. ಅಲ್ಲದೆ ಯುವ ವಿಭಾಗದ ಆಕಾಂಕ್ಷಾ-2018 ಸ್ಪರ್ಧೆಯಲ್ಲಿ ವಿಜೇತರಾದ ಮೇಘಾ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ಮಾತನಾಡಿ, ಸಿಟಿ ಪ್ರಾದೇಶಿಕ ಸಮಿತಿಯ ಉಪಯುಕ್ತ ಕಾರ್ಯವನ್ನು ಮಾಡುತ್ತಿರುವುದು ಅಭಿನಂದನೀಯ. ಸಮಿತಿಯು ಇದೇ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬೋಳ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನಲ್ಯಗುತ್ತು ಪ್ರಕಾಶ್ ಟಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.