ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ.
ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್ ವ್ಯವಸ್ಥೆ ಇಲ್ಲದ ಬಗ್ಗೆ ದಿಲ್ಲಿಯಲ್ಲಿ ಕರ್ನಾಟಕದ ಪತ್ರಕರ್ತರ ಮನವಿ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಪ್ರತಿ ಕ್ರಿಯಿಸಿ, ವಿಶೇಷ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಭರವಸೆ ನೀಡಿದ್ದಾರೆ.
ಬಿಎಂಟಿಸಿಯಲ್ಲಿ ಕೋವಿಡ್ ಸಮಯದಿಂದ ಅನೇಕ ಬಸ್‌ಗಳು ಸಂಚಾರ ನಡೆಸದೆ ನಿಂತಿವೆ. ಇದ ರಲ್ಲಿ ಮೂರು ಬಸ್‌ಗಳನ್ನು ಮಂಗಳೂರಿಗೆ ಕಳುಹಿಸುವಂತೆ ಅವರು ಈಗಾಗಲೇ ಸಾರಿಗೆ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಬಸ್ ಸಂಪರ್ಕ ಸದ್ಯದಲ್ಲೇ ಆರಂಭಗೊಳ್ಳುವ ನಿರೀಕ್ಷೆ ಇದೆ.
Related Articles
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದ ನಿಯಂತ್ರಣಾಧಿಕಾರಿ ರಾಜೇಶ್ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಕಾರ್ಯಾಚರಣೆ ಆರಂಭಿಸುವ ಬಗ್ಗೆ ಮಂಗಳೂರು ವಿಭಾಗಕ್ಕೆ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
ಸೂಕ್ತ ಕ್ರಮ
ಮಂಗಳೂರು ಸಿಟಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ಸಚಿವರು ವಿಷಯ ಪ್ರಸ್ತಾವ ಮಾಡಿರುವುದು ಗಮನಕ್ಕೆ ಬಂದಿದೆ. ಈ ಕುರಿತಂತೆ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ವಿ. ಅನ್ಬುಕುಮಾರ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ