Advertisement
ಚುನಾವಣಾ ಕಣದಲ್ಲಿ ಅಂತಿಮವಾಗಿ ಕಿಶೋರ್ ಬಿ.ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಇದ್ದಾರೆ. ನಾಮಪತ್ರ ಹಿಂಪಡೆಯಲು ಸೋಮವಾರ (ಅ.7) ಕೊನೆಯ ದಿನವಾಗಿತ್ತು. ಉಪ ಚುನಾವಣೆಯು ಅ. 21ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಸ್ಥಳೀಯಾಡಳಿತ ಪ್ರಾಧಿಕಾರ ಕ್ಷೇತ್ರದ ವ್ಯಾಪ್ತಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದೆ. ಹೀಗಾಗಿ ಈ ಉಪ ಚುನಾವಣೆಯಲ್ಲಿ ಎರಡು ಜಿಲ್ಲೆಗಳ ಸ್ಥಳೀಯಾಡಳಿತಗಳ ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು 392 ಮತಗಟ್ಟೆಗಳಿದ್ದು, 6,037 ಮಂದಿ ಮತದಾರರಿದ್ದಾರೆ. ದಕ್ಷಿಣ ಕನ್ನಡದಲ್ಲಿ 234 ಮತಗಟ್ಟೆ, 3,551 ಮತದಾರರು, ಉಡುಪಿಯಲ್ಲಿ 158 ಮತಗಟ್ಟೆ, 2,486 ಮತದಾರರಿದ್ದಾರೆ. ಈ ಉಪ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಗ್ರಾಮ ಪಂಚಾಯ್ತಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿ 234 ಸ್ಥಳೀಯ ಸಂಸ್ಥೆಗಳಲ್ಲಿ 3,580 ಮಂದಿ ಇದ್ದಾರೆ. ಅವರಲ್ಲಿ 3,551 ಮಂದಿ ಪ್ರಸ್ತುತ ಸದಸ್ಯರಿದ್ದಾರೆ. 29 ಸ್ಥಾನಗಳು ಖಾಲಿ ಇವೆ. ಉಡುಪಿಯಲ್ಲಿ ಗ್ರಾಮ ಪಂಚಾಯ್ತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿ 158 ಸ್ಥಳೀಯ ಸಂಸ್ಥೆಗಳಲ್ಲಿ 2,490 ಮಂದಿಯಲ್ಲಿ ಪ್ರಸ್ತುತ 2,486 ಮಂದಿ ಇದ್ದಾರೆ. 4 ಸ್ಥಾನಗಳು ಖಾಲಿ ಇವೆ.
Related Articles
Advertisement