ರಾಯಚೂರು: ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಭಿರಾಮ್ ಡಿ. ಶಂಕರ ಸೋಮವಾರ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ದಿಗೆ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಪ್ರಾಮಾಣಿಕ ಸೇವೆ ಸಲ್ಲಿಸುವುದಾಗಿ ಹೇಳಿದರು. ಜಿಲ್ಲೆಯ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಆದರೆ, ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಕಾರ್ಯೋನ್ಮುಖವಾಗುತ್ತೇನೆ. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಬರ ಇರುವುದು ಗಮನಕ್ಕಿದೆ. ಜನ ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. 2011ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾದ ಅಭಿರಾಮ್ ಅವರು, ಎರಡು ವರ್ಷ ಬೆಂಗಳೂರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಜಿಪಂ ಉಪ ಕಾರ್ಯದರ್ಶಿ ಮಹ್ಮದ್‌ಯೂಸೂಫ್, ಯೋಜನಾಧಿಕಾರಿ ಶರಣಬಸವ, ಸಿಬ್ಬಂದಿ ಇದ್ದರು.