ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಕಿಚ್ಚು ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೂ ಹಬ್ಬಿದೆ. ದಿಲ್ಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ವೇಳೆ ಸುಮಾರು 35ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಂತರ ಬಿಡುಗಡೆಗೊಳಿಸಲಾಗಿದೆ.
ದೆಹಲಿಯಲ್ಲಿ ಪ್ರತಿಭಟನಾ ಕಾವು ಜೋರಾಗಿದ್ದು, ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರವಿವಾರ ಪ್ರತಿಭಟನೆ ನಡೆಸಿದ್ದರು. ಆದರೆ ರಾತ್ರಿಯಾಗುತ್ತಿದ್ದಂತೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು.
ಪ್ರತಿಭಟನಾಕಾರರು ದೆಹಲಿ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ಸುಗಳಿಗೆ ಬೆಂಕಿ ಹಚ್ಚಿದ್ದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಬೆಂಕಿ ನಂದಿಸಲು ಬಂದ ಅಗ್ನಿ ಶಾಮಕ ದಳ ಸಿಬ್ಬಂದಿಯ ನಡುವೆಯೂ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದರು.
ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ಕ್ಯಾಂಪಸ್ ಒಳಗೆ ನುಗ್ಗಿದ್ದರು. ಅನುಮತಿ ಇಲ್ಲದೇ ಪೊಲೀಸರು ಕ್ಯಾಂಪಸ್ ಪ್ರವೇಶಿದ್ದಾರೆ ಎಂದು ವಿಶ್ವ ವಿದ್ಯಾಲಯದ ಅಧಿಕಾರಿಗಳು ದೂರಿದ್ದರು.
ಈ ವೇಳೆ ಘರ್ಷಣೆಯಲ್ಲಿ ಕೆಲ ಪೊಲೀಸರಿಗೂ ಗಾಯವಾಗಿತ್ತು. ಇದರಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸುಮಾರು 35ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.