Advertisement

ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಖಚಿತ : ಬಿಎಸ್‌ವೈ

10:06 AM Jan 28, 2020 | sudhir |

ಹಾಸನ/ಮೈಸೂರು/ಮಡಿಕೇರಿ: ಈ ಮಾಸಾಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Advertisement

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕು ಸಿಂಗನಕುಪ್ಪೆ ಗ್ರಾಮದ ಹೆಲಿಪ್ಯಾಡ್‌ನ‌ಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಸ್‌.ಎಂ.ಕೃಷ್ಣ ಅವರ ನಂತರ, 16 ವರ್ಷ ಕಳೆದ ಮೇಲೆ ತಾವು ದಾವೋಸ್‌ಗೆ ಹೋಗಿದ್ದು, ರಾಜ್ಯಕ್ಕೆ ತುಂಬಾ ಉಪಯುಕ್ತವಾಗಿದೆ.

ರಾಜ್ಯದಲ್ಲಿ ಅನೇಕರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಹಲವು ಕೈಗಾರಿಕೋದ್ಯಮಿಗಳು ನಮ್ಮ ರಾಜ್ಯಕ್ಕೆ ಬರಲು ಒಪ್ಪಿದ್ದಾರೆ. 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ತಾವು ವೈಯಕ್ತಿಕವಾಗಿ ಭೇಟಿ ಮಾಡಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ. ಇದರಿಂದ ಕೃಷಿ ಕ್ಷೇತ್ರದ ಸಮಸ್ಯೆ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗಲಿದೆ. ದಾವೋಸ್‌ ಪ್ರವಾಸದ ವೇಳೆ ಮಾಡಿಕೊಳ್ಳಲಾದ ಒಪ್ಪಂದಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್‌ನಲ್ಲಿ ಉತ್ತಮ ಕಾರ್ಯಕ್ರಮಗಳ ಘೋಷಣೆ:
ಬಳಿಕ, ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ಸಪ್ತಮಾತೃಕಾ ದೇವೀರಮ್ಮ ದೇವಸ್ಥಾನದ ರಾಜಗೋಪುರ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಮಾತನಾಡಿ, ಪ್ರಸ್ತುತ ರಾಜ್ಯ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮಾರ್ಚ್‌ 5ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಕೃಷಿಕರು, ಕಾರ್ಮಿಕರು ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿ, ಉತ್ತಮ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇನೆ.

ಭವಿಷ್ಯದ ದಿನಗಳಲ್ಲಿ ಮಹಿಳೆಯರ ಬದುಕು ಹಸನಾಗುವಂತಹ ವಿನೂತನ ಯೋಜನೆಗಳನ್ನು ಜಾರಿ ಮಾಡುತ್ತೇನೆ. ಕೈಗಾರಿಕೆಯ ಜತೆ, ಜತೆಗೆ ಕೃಷಿ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

Advertisement

ಎಲ್ಲ ಜಿಲ್ಲೆಗಳಲ್ಲಿ ವೈದ್ಯ ಕಾಲೇಜು:
ಬಳಿಕ ಮಡಿಕೇರಿಯಲ್ಲಿ ಮಾತನಾಡಿ, ಚಿಕ್ಕಮಗಳೂರು, ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಕೇಂದ್ರ ಸರಕಾರದ ಸಹಕಾರದೊಂದಿಗೆ ವೈದ್ಯಕೀಯ ಕಾಲೇಜುಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದರು.

ಮಳೆ ಹಾನಿಯಿಂದ ಕಷ್ಟ, ನಷ್ಟ ಅನುಭವಿಸಿರುವ ಕೊಡಗಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಕೊಡಗಿನ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ.ಗಳ ಹೆಚ್ಚುವರಿ ನೆರವು ನೀಡಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಎಲ್ಲರಿಗೂ ಮನೆ ನಿರ್ಮಿಸಿ ಕೊಡಲಾಗುವುದು. ಅಲ್ಲದೆ, ಅಗತ್ಯ ಪರಿಹಾರವನ್ನೂ ನೀಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next