ಚಿತ್ರದುರ್ಗ: ದೀಪಾವಳಿ ಹಬ್ಬದ ನಂತರ ಖಾಲಿ ಇರುವ ಸಚಿವ ಸ್ಥಾನ ಹಾಗೂ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸ್ಥಾನದ ಆಕಾಂಕ್ಷಿಗಳ ಕೋರಿಕೆ ಜೊತೆಗೆ ಯಾವ ಜಿಲ್ಲೆ ಮತ್ತು ಸಮುದಾಯಗಳಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಬೇಕೆಂಬ ಆಸೆಯಿಂದ ನವೆಂಬರ್ 6ಕ್ಕೆ ಸರ್ಕಾರ ಪತನವಾಗುತ್ತದೆ ಎನ್ನುತ್ತಿದ್ದಾರೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ಶೆಟ್ಟರ್ ಮತ್ತು ಯಡಿಯೂರಪ್ಪ ಆಸೆ ಈಡೇರುವುದಿಲ್ಲ ಎಂದು ಕುಟುಕಿದರು.
ರಾಷ್ಟ್ರೀಕೃತ ಬ್ಯಾಂಕ್‌ಗಳು ಚಿತ್ರದುರ್ಗ, ಸವದತ್ತಿ ಮತ್ತಿತರ ಕಡೆ ರೈತರಿಗೆ ನೋಟಿಸ್ ನೀಡುತ್ತಿರುವುದು ಹಾಗೂ ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತಿರುವುದರಿಂದ ರಾಜ್ಯದ ರೈತರು ಆತಂಕ ಪಡಬೇಕಾಗಿಲ್ಲ. ಹೊರ ರಾಜ್ಯಗಳಲ್ಲಿ ಬ್ಯಾಂಕ್‌ಗಳು ರೈತರ ಮೇಲೆ ಪ್ರಕರಣ ದಾಖಲು ಮಾಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ.
– ಡಾ| ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ