Advertisement
ಸಂಪುಟ ವಿಸ್ತರಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಗಿದ್ದು, ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಮತ್ತೂಂದು ಸಭೆ ನಡೆಸಿ ಅಂತಿಮ ತೀರ್ಮಾನವಾಗಲಿದೆ. ಬಹುತೇಕ ಬುಧವಾರ ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನ ಭರ್ತಿಯಾಗುವ ಸಾಧ್ಯತೆಯಿದೆ.
Related Articles
Advertisement
ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲು ಹೋಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಪಕ್ಷೇತರ ಶಾಸಕ ಆರ್.ಶಂಕರ್ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದರು. ಬಿಜೆಪಿಯತ್ತ ವಾಲಿದ್ದ ಅವರನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತರುವ ಸಂಬಂಧ ಹೈಕಮಾಂಡ್ ಒಪ್ಪಿಗೆ ಪಡೆಯಲು ಸಿದ್ದರಾಮಯ್ಯ ಅವರೇ ಕರೆದೊಯ್ದಿದ್ದರು ಎಂದೂ ಹೇಳಲಾಗಿದೆ.
ಆದರೆ ಈ ಮಧ್ಯೆ, ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯಕ್ಕೆ ಸಂಪುಟ ವಿಸ್ತರಣೆಯೂ ಇಲ್ಲ, ಪುನಾರಚನೆಯೂ ಇಲ್ಲ ಎಂದು ಹೇಳಿದ್ದಾರೆ. ಆದರೂ ಸೋಮವಾರ ಇಡೀ ದಿನ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯ ಚರ್ಚೆಯೇ ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ವಲಯದಲ್ಲಿ ನಡೆದಿತ್ತು.
ಬಿಜೆಪಿಯಿಂದ ಕಾದು ನೋಡುವ ತಂತ್ರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಕಸರತ್ತು ಕೈಗೊಂಡಿರುವ ಬೆನ್ನಲ್ಲೇ ಬಿಜೆಪಿಯು ಕಾದು ನೋಡುವ ತಂತ್ರಕ್ಕೆ ಶರಣಾಗಿದೆ.
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನ ಅತೃಪ್ತರನ್ನು ಸೆಳೆಯಲು ರಹಸ್ಯ ಕಾರ್ಯಾಚರಣೆ ಮಾಡಿತ್ತು. ಕೆಲವರು ಸಂಪರ್ಕಕ್ಕೆ ಸಿಕ್ಕಿ ಬರುವುದಾಗಿಯೂ ಭರವಸೆ ನೀಡಿದ್ದರು. ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ರಾಜೀನಾಮೆ ಪರ್ವ ಆರಂಭವಾಗಬೇಕಿತ್ತು.
ಆದರೆ, ಇದ್ದಕ್ಕಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮೂಲಕ ಅತೃಪ್ತರಿಗೆ ಮಣೆ ಹಾಕುವ ಕಾರ್ಯತಂತ್ರ ರೂಪಿಸಿರುವುದರಿಂದ ಮುಂದೇನು ಮಾಡಬೇಕು ಎಂಬ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಆಥವಾ ಪುನಾರಚನೆಯಾದರೂ ಕಾಂಗ್ರೆಸ್-ಜೆಡಿಎಸ್‌ನಲ್ಲಿ ಅತೃಪ್ತಿ ಸ್ಫೋಟವಾಗಲಿದ್ದು ಜೂ.1 ರ ನಂತರ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಮೇ 29 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ರಂಗಪ್ರವೇಶ ಮಾಡಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.