ಬೆಂಗಳೂರು: ಕೇಂದ್ರ ಸರಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರಕಾರ, ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸುಮಾರು 70 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ.
ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ. ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ. ಬರಕ್ಕೆ ತುತ್ತಾದ ರೈತರಿಗೆ ಪರಿಹಾರ ಕೊಡಲು ಇವರಲ್ಲಿ ಹಣವಿಲ್ಲ. ಆದರೆ, ಸಂಪುಟ ದರ್ಜೆ ಭಾಗ್ಯಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದ್ದಾರೆ.
ನಾನು ಯಾವ ಗ್ಯಾರಂಟಿಗಳನ್ನು ತಪ್ಪು ಎಂದು ಹೇಳುವುದಿಲ್ಲ, ಅದರ ಬಗ್ಗೆ ತಕರಾರೂ ಇಲ್ಲ. ಬೇಕಾದರೆ ಇನ್ನೂ ಐದು ಗ್ಯಾರಂಟಿಗಳನ್ನು ಜಾರಿ ಮಾಡಲಿ. ಆದರೆ, ಈಗಾಗಲೇ ಜಾರಿ ಮಾಡಿರುವ ಗ್ಯಾರಂಟಿಗಳು ಏನಾಗಿವೆ ಎಂಬ ಬಗ್ಗೆ ಸರಕಾರ ಆತ್ಮವಿಮರ್ಶೆ ನಡೆಸಬೇಕು ಎಂದರು.
ಅನ್ಯ ಕಾರಣದಿಂದ ಅಮಿತ್ ಶಾ ಅವರನ್ನು ನಾನು ಭೇಟಿ ಮಾಡಲಾಗಲಿಲ್ಲ. ಈ ಬಗ್ಗೆ ಮೊದಲೇ ಅವರಿಗೆ ತಿಳಿಸಿದ್ದೆ. ಇದರಲ್ಲಿ ಯಾವುದೇ ಅನುಮಾನ, ಗೊಂದಲ ಬೇಡ.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ