Advertisement

ಶಾಲಾ ಕಟ್ಟಡ ನಿರ್ಮಾಣ,ದುರಸ್ತಿಗೆ ಟೆಂಡರ್‌ ಕರೆಯಿರಿ 

06:35 AM Sep 04, 2018 | Team Udayavani |

ಬೆಂಗಳೂರು: ರಾಜ್ಯದ 233 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡಗಳ ಮರು ನಿರ್ಮಾಣ ಮತ್ತು 502 ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿ ದುರಸ್ತಿ ಮತ್ತು ನಿರ್ಮಾಣಕ್ಕಾಗಿ ಶೀಘ್ರವೇ ಟೆಂಡರ್‌ ಕರೆದು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣಕ್ಕಾಗಿ 300 ಕೋಟಿ ರೂ.
ವೆಚ್ಚದ ಪ್ರಸ್ತಾವನೆ ಮತ್ತು 233 ಸರ್ಕಾರಿ ಪ್ರೌಢಶಾಲೆಗಳನ್ನು ನೆಲಸಮಗೊಳಿಸಿ ಮರು ನಿರ್ಮಾಣ ಮಾಡಲು 7890.75 ಲಕ್ಷ ರೂ. ವೆಚ್ಚದ ಪ್ರಸ್ತಾವನೆಗಳನ್ನು ಇಲಾಖೆ ವತಿಯಿಂದ ಈಗಾಗಲೇ ಸಲ್ಲಿಸಲಾಗಿದೆ. ಅದರಂತೆ ಕಾಮಗಾರಿ ಕೈಗೊಳ್ಳಲು ಟೆಂಡರ್‌ ಪ್ರಕ್ರಿಯೆ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಬಾರ್ಡ್‌ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ವಿಳಂಬವಿಲ್ಲದೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಈಗಾಗಲೇ 150 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಇದಕ್ಕೂ ತ್ವರಿತವಾಗಿ ಟೆಂಡರ್‌ ಕರೆದು ಕಾಮಗಾರಿ ಕೈಗೊಳ್ಳಬೇಕು. 2018-19ನೇ ಸಾಲಿನ ಆಯವ್ಯಯದಲ್ಲಿ ನಬಾರ್ಡ್‌ ಕಾಮಗಾರಿಗಳಿಗೆ 5.76 ಕೋಟಿ ರೂ.ಹಂಚಿಕೆ ಮಾಡಲಾಗಿದ್ದು, ಇನ್ನೂ ಅವಶ್ಯವಿರುವ ರೂ.39.42 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಹುದ್ದೆ ಸೃಜನೆ ಮತ್ತು ಭರ್ತಿಗೆ ಪ್ರಸ್ತಾವನೆ ಸಲ್ಲಿಸಿ: ಕಾಲೇಜು ಶಿಕ್ಷಣ ಇಲಾಖೆಯಲ್ಲಿ 395 ಪ್ರಾಂಶುಪಾಲರನ್ನು ನೇಮಕ ಮಾಡಿಕೊಳ್ಳಬೇಕಿದೆ. ಜತೆಗೆ 480 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ.

ಒಟ್ಟಾರೆ 3000 ಹುದ್ದೆಗಳ ಸೃಜನೆ ಮತ್ತು ನೇಮಕಾತಿ ಆಗಬೇಕಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್‌.ಮಂಜುಳಾಅವರು ತಿಳಿಸಿದಾಗ, ಈ ಕುರಿತು ತಕ್ಷಣವೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಎಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್‌ ಮತ್ತಿತರರು ಹಾಜರಿದ್ದರು.

ಸಮಗ್ರ ವರದಿಗೆ ಸೂಚನೆ
ಬೆಂಗಳೂರು
: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರ
ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ
ಒದಗಿಸುವ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಶಿಕ್ಷಣ
ಗುಣಮಟ್ಟದ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಲ್ಲಿಸಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next