ನವದೆಹಲಿ: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷದೊಳಗೆ ತಲೆದೋರಿರುವ ಅಸಮಾಧಾನ, ಬಿಕ್ಕಟ್ಟು ಶೀಘ್ರವೇ ಕೊನೆಗೊಳ್ಳಲಿದೆಯಾ? ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಸಹಮತ ಮೂಡಲಿದೆಯಾ ಅಥವಾ ಸಿಧು ಅವರನ್ನು ಕಳೆದುಕೊಂಡರೆ ಅವರಿಗೆ ಪರ್ಯಾಯ ವ್ಯಕ್ತಿ ಯಾರು ಎಂಬ ಭಯದಲ್ಲಿ ಕಾಂಗ್ರೆಸ್ ಸಿಲುಕಿದಯೇ ಎಂಬಿತ್ಯಾದಿ ಪ್ರಶ್ನೆಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗತೊಡಗಿದೆ.
ಇದನ್ನೂ ಓದಿ:ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ
ಇದಕ್ಕೆ ಮುಖ್ಯ ಕಾರಣ ಇತ್ತೀಚೆಗಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ನಲ್ಲಿ ಮಾತನಾಡುತ್ತ, ಪಂಜಾಬ್ ಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸಿಖ್ ಸಮುದಾಯದವರನ್ನೇ ಆಯ್ಕೆ ಮಾಡಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹ ಹರಿದಾಡುತ್ತಿದೆ.
ಇದೀಗ ಪಂಜಾಬ್ ಕಾಂಗ್ರೆಸ್ ಘಟಕದೊಳಗೆ ತಲೆದೋರಿರುವ ಬಿಕ್ಕಟ್ಟು ಶಮನಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೂವರನ್ನೊಳಗೊಂಡ ಸಮಿತಿಯನ್ನು ರಚಿಸಿರುವುದಾಗಿ ವರದಿ ತಿಳಿಸಿದೆ.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಸುತ್ತಿದ್ದೇವೆ. ಅಲ್ಲದೇ ನಮ್ಮ ಆಯ್ಕೆ ಬಗ್ಗೆ ಇಡೀ ಪಂಜಾಬ್ ಹೆಮ್ಮೆ ಪಡಲಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.