Advertisement

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ರದ್ದು

04:25 PM Mar 18, 2020 | Suhan S |

ಚಾಮರಾಜನಗರ: ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ರದ್ದು ಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಆದೇಶ ಹೊರಡಿಸಿದ್ದಾರೆ.

Advertisement

ಸುದ್ದಿ ಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ, ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಮಾ. 16ರಂದು ನಡೆದ ವಿಡಿಯೋ ಸಂವಾದ ಸಂದರ್ಭದಲ್ಲಿ ಮಾಡಿದ ಪ್ರಸ್ತಾಪ ಹಾಗೂ ಹನೂರು ತಾಲೂಕು ತಹಶೀಲ್ದಾರ್‌ ಯುಗಾದಿ ಸಂದರ್ಭದಲ್ಲಿ ತಮಿಳುನಾಡು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ 2 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ಹಿನ್ನೆಲೆಯಲ್ಲಿ ಸಾರ್ವಜನಿಕರ, ಭಕ್ತಾದಿಗಳ ಆರೋಗ್ಯ ಹಿತದೃಷ್ಟಿಯಿಂದ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮ ರದ್ದುಪಡಿಸುವಂತೆ ಕೋರಿರುವ ಮೇರೆಗೆ ಮಾ.21ರಿಂದ 26ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮ ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪತ್ರ ಬರೆದಿದ್ದೇವೆ:ತಮಿಳುನಾಡಿನಿಂದ ಯುಗಾದಿ ಜಾತ್ರೆಗೆ ಹೆಚ್ಚಿನ ಭಕ್ತಾದಿಗಳು ಬರುವ ಹಿನ್ನಲೆಯಲ್ಲಿ ಕೊಯಮತ್ತೂರು, ಸೇಲಂ, ಈರೋಡ್‌ ಜಿಲ್ಲೆಯ ಅಧಿಕಾರಿಗಳಿಗೆ ಪತ್ರ ಬರೆದು ವಿಷಯ ತಿಳಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಸಂತೆ ನಿಷೇಧಿಸಿರುವುದರಿಂದ ದಿನನಿತ್ಯ ಬಳಕೆಯ ಆಹಾರ ಸಾಮಗ್ರಿಗಳು ತರಕಾರಿ ಹಣ್ಣು ಇತರೆ ಪದಾರ್ಥಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ. ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳದಂತೆ ಎಲ್ಲಾ ಅವಶ್ಯಕ ಕ್ರವ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯರ್‌ ನಾರಾಯಣರಾವ್‌, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಎಚ್‌.ಡಿ. ಆನಂದ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್‌ ಡಾ. ಸಂಜೀವ್‌ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next