Advertisement

ಅಭ್ಯರ್ಥಿ ಆಯ್ಕೆ ಕಗ್ಗಂಟು;ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ಇನ್ನೂ ಗೊಂದಲ

06:00 AM Oct 12, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು ಬಳ್ಳಾರಿ, ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಲು ಕಸರತ್ತು ಮುಂದುವರಿಸಿದೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಘೋಷಿಸಲು ಜೆಡಿಎಸ್‌ ಸಹ ಇನ್ನೂ ಲೆಕ್ಕಾಚಾರದಲ್ಲಿ ಮುಳುಗಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎರಡೂ ಪಕ್ಷದಲ್ಲಿ ಬಂಡಾಯದ ಆತಂಕವೂ ಎದುರಾಗಿರುವುದರಿಂದ ಆಯ್ಕೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.

Advertisement

ಬಿಜೆಪಿ ಮಂಡ್ಯ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಹುಡುಕಿಕೊಂಡಿದ್ದ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಎಂಬುವರನ್ನು ಪಕ್ಷಕ್ಕೆ ಸೇರಿಸಿಕೊಂಡು ಅಭ್ಯರ್ಥಿ ಎಂದು ಘೋಷಿಸಿದೆ.  ಈ ಮಧ್ಯೆ, ರಾಮನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿರುವುದು ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಗುರುವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಮುಖಂಡರು ಕಾಂಗ್ರೆಸ್‌ ಅಭ್ಯರ್ಥಿ ಹಾಕಲೇಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಕಚೇರಿಯಲ್ಲಿ ಪೀಠೊಪಕರಣ ಧ್ವಂಸ ಮಾಡಿ ಬೀಗ ಜಡಿದು ಪ್ರತಿಭಟನೆ ಸಹ ಮಾಡಿದ್ದಾರೆ. ಮಂಡ್ಯದಲ್ಲೂ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿರುವುದಕ್ಕೆ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು ಒಟ್ಟಾರೆ ಕಾಂಗ್ರೆಸ್‌ಗೆ  ಈ ಬೆಳವಣಿಗೆ ತಲೆನೋವು ತಂದಿದೆ.

ಮತ್ತೆ ಸಭೆ ಮುಂದೂಡಿಕೆ
ಇನ್ನು ಬಳ್ಳಾರಿ ಅಭ್ಯರ್ಥಿ ಆಯ್ಕೆ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಗುರುವಾರ ನಡೆಯಬೇಕಿದ್ದ ಸಭೆಯೂ ಮುಂದೂಡಲಾಗಿದ್ದು ಶುಕ್ರವಾರ ನಿಗದಿಯಾಗಿದೆ.  ಈ ಕ್ಷೇತ್ರದಲ್ಲಿ ಶಾಸಕರ ನಡುವೆಯೇ ಎರಡು ಗುಂಪುಗಳಾಗಿರುವುದರಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಸಾಧ್ಯವಾಗುತ್ತಿಲ್ಲ. ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಎಲ್ಲರೂ ಹಿಂದೇಟು ಹಾಕುತ್ತಿರುವುದರಿಂದ ಜೆಡಿಎಸ್‌ಗೆ ಆ ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.ಉಪ ಚುನಾವಣೆಯಲ್ಲಿ ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಆನಂದ್‌ ನ್ಯಾಮಗೌಡ, ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ ಅಭ್ಯರ್ಥಿಗಳಾಗಿದ್ದಾರೆ. ಎರಡೂ ಪಕ್ಷಗಳಲ್ಲೂ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನವಿದೆ. 

ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಇನ್ನೂ ಲೆಕ್ಕಾಚಾರದಲ್ಲಿ ಮುಳುಗಿದ್ದು ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಪುತ್ರ ಚಂದ್ರಶೇಖರ್‌ ಬಿಜೆಪಿಗೆ ಸೇರ್ಪಡೆಯಾದ ನಂತರ ಅವರೇ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ.

Advertisement

ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಹಾಕದೆ ಕಳೆದ ಬಾರಿ ಸ್ಪರ್ಧಿಸಿದ್ದ ಇಕ್ಬಾಲ್‌ ಹುಸೇನ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಮಾಜಿ ಸಚಿವ ಸಿ.ಪಿಯೋಗೇಶ್ವರ್‌ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಹೀಗಾಗಿ, ಕೊನೇ ಕ್ಷಣದವರೆಗೂ ಕಾದು ನೋಡುವ ತಂತ್ರ ಅನುಸರಿಸಲಾಗುತ್ತಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next