Advertisement

ಸಿ, ಡಿ ದರ್ಜೆ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ: ಸರ್ಕಾರ ಸ್ಪಷ್ಟನೆ 

09:21 PM Feb 14, 2023 | Team Udayavani |

ವಿಧಾನ ಪರಿಷತ್ತು: ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್‌ ಕಲೆಕ್ಟರ್‌, ಕ್ಲಕ್‌, ಡಾಟಾ ಎಂಟ್ರಿ ಆಪರೇಟರ್‌, ಕ್ಲೀನರ್‌ ಸೇರಿ ಸುಮಾರು 30 ಸಾವಿರ ನೌಕರರನ್ನು “ಸಿ’ ಮತ್ತು “ಡಿ’ ದರ್ಜೆ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Advertisement

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಅವರು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಸ್ಥಳೀಯ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆದರೆ ಅವರು ಸ್ಥಳೀಯ ಗ್ರಾಮ ಪಂಚಾಯ್ತಿ ನೌಕರರಾಗಿದ್ದು, ಅವರನ್ನು ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಜುನಾಥ್‌ ಭಂಡಾರಿ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ ಸೇರಿದಂತೆ ಇನ್ನಿತರ ನೌಕರರಿಗೆ ಹಲವು ತಿಂಗಳಿಂದ ಸರ್ಕಾರ ವೇತನ ಪಾವತಿ ಮಾಡಿಲ್ಲ. ಹೀಗಾಗಿ ಸಂಸಾರ ನಿರ್ವಹಣೆ ಕೂಡ ಅವರಿಗೆ ಕಷ್ಟವಾಗಿದೆ. ಸಕಾಲಕ್ಕೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಈ ನೌಕರರು ಸಂಕಷ್ಟದಲ್ಲಿ ಬದುಕು ಕಳೆಯುತ್ತಿದ್ದಾರೆ. ಕನಿಷ್ಟ ವೇತನಕ್ಕೆ ಗರಿಷ್ಟ ಕೆಲಸ ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಸರ್ಕಾರ ಈ ನೌಕಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಾತು ಮುಂದುವರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈಗಾಗಲೇ ಗ್ರಾಮ ಪಂಚಾಯ್ತಿ ನೌಕರರಿಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ಕನಿಷ್ಟ ವೇತನ ಮತ್ತು ತುಟ್ಟಿಭತ್ಯೆಯನ್ನು ಗ್ರಾಮ ಪಂಚಾಯ್ತಿ ಪಾವತಿಸುತ್ತಿದೆ. ಅನಿರೀಕ್ಷಿತ ಸಂದರ್ಭಗಳಲ್ಲಿ ಅಪಘಾತಕ್ಕೀಡಾದಾಗ ಅವಲಂಬಿತ ಕುಟುಂಬದ ಸದಸ್ಯರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ ಜನ್‌ಧನ್‌ ಯೋಜನೆಯಡಿ ವಿಮಾ ಪಾಲಿಸಿಗಳನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಗ್ರಾಮ ಪಂಚಾಯ್ತಿ ನೌಕರ ಸೇವೆಯಲ್ಲಿರುವಾಗ ಮರಣ ಹೊಂದಿದಲ್ಲಿ ಅವರ ಅವಲಂಬಿತರು ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಆರ್ಹರಿದ್ದಲ್ಲಿ ಪಂಚಾಯ್ತಿಗಳಲ್ಲಿ ಖಾಲಿಯಿರುವ ಹುದ್ದೆಗೆ ಬೇರೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವುದರ ಬದಲು ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅವಲಂಬಿತರನ್ನು ಜಿಲ್ಲಾ ಪಂಚಾಯ್ತಿ ಸಿಇಒ ಅನುಮೋದನೆ ಪಡೆದು ಅನುಕಂಪದ ಮೇಲೆ ನೇಮಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next