ಮಂಡ್ಯ: ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ದಿನಬಳಕೆ ವಸ್ತುಗಳನ್ನು ಪೂರೈಸಲು ಕ್ಯಾಂಟೀನ್ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಇತರೆ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದದರು.
ನೌಕರರ ಹಿತ ಕಾಪಾಡುವುದೇ ಗುರಿ: ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕ್ಯಾಂಟೀನ್ ಪ್ರಾರಂಭಿಸಿರುವಂತೆ ಮುಂದಿನ ದಿನಗಳಲ್ಲಿ ಮಂಡ್ಯದಲ್ಲೂ ಕ್ಯಾಂಟೀನ್ ಆರಂಭಿಸಲಾಗುವುದು. ರಾಜ್ಯ ಸರ್ಕಾರಿ ನೌಕರರ ಸಂಘಟನೆ ನೌಕರರ ಅಖಂಡ ಏಕ ಸಂಘಟನೆಯಾಗಿದೆ. ಎಲ್ಲ ನೌಕರರ ಹಿತ ಕಾಪಾಡುವುದೇ ಸಂಘಟನೆಯ ಉದ್ದೇಶ ಮತ್ತು ಗುರಿಯಾಗಿದೆ. ನಾನು ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಅಧಿಕಾರ ಸಿಕ್ಕ ಸಂದರ್ಭದಲ್ಲಿ ನೌಕರರ ಧ್ವನಿಯಾಗಿ ಬೆಳಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಮೇಲೆ ದೂರು ಬಂದರೆ ಮೂಕ ಅರ್ಜಿಗಳ ತನಿಖೆ ಮಾಡುವ ಆದೇಶ ಮುನ್ನ ವಿಲೇ ಮಾಡುವ ಆದೇಶವನ್ನು ಹೊರಡಿಸಲಾಗಿದೆ. ಸರ್ಕಾರಿ ನೌಕರರು ಮೃತರಾದರೆ ಅವರ ಶವ ಸಂಸ್ಕಾರದ ವೆಚ್ಚವನ್ನು 15 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಿದ್ದು, ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದರು.
ವೇತನ ತಾರತಮ್ಯದ ವಿರುದ್ಧ ಹೋರಾಟ: ಮಾನಸಿಕ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿರುವ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿಗೆ ಆತ್ಮಸೈರ್ಯ ತುಂಬಬೇಕು. ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಕೊಡುವ ವೇತನವನ್ನು ರಾಜ್ಯ ಸರ್ಕಾರಿ ನೌಕರರಿಗೂ ಕೊಡಬೇಕು ಎಂದು ಹೋರಾಟ ರೂಪಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಶಂಭುಗೌಡ, ರಾಜ್ಯ ಗೌರವಾಧ್ಯಕ್ಷ ಶಿವರುದ್ರಪ್ಪ, ರಾಜ್ಯ ಉಪಾಧ್ಯಕ್ಷರಾದ ರುದ್ರಪ್ಪ, ಮಹಾಲಿಂಗು, ಶ್ರೀಧರ್, ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಟಿ.ಕೃಷ್ಣಯ್ಯ ದೇವರಾಜು, ಕೃಷ್ಣ, ಮೊದಲಾದವರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ಸನ್ಮಾನಿಸಿದರು.