ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರದ ಅಬ್ಬರ ತೀವ್ರಗೊಂಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೇ 6ರಂದು “ನಮ್ಮ ಕರ್ನಾಟಕ ಯಾತ್ರೆ” ಎಂಬ ಬೃಹತ್ ರೋಡ್ ಶೋ ನಡೆಸುವ ಮೂಲಕ ಕೇಸರಿ ಪಡೆಗೆ ಕೊನೆಯ ಕ್ಷಣದ ಬೂಸ್ಟರ್ ಡೋಸ್ ನೀಡಲಿದ್ದಾರೆ.
ಬೆಂಗಳೂರಿನ 17 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಬೆಳಗ್ಗೆ 11 ಗಂಟೆಯಿಂದ ರಾತ್ರಿ 10ರ ವರೆಗೆ ಒಟ್ಟು 36.6 ಕಿ.ಮೀ. ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ ನಡೆಯಲಿದೆ.
ಮಲ್ಲೇಶ್ವರ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ವಿವರ ನೀಡಿದ್ದಾರೆ.
ಕರ್ನಾಟಕದ ಜನತೆ 9 ವರ್ಷಗಳಿಂದ ತಮ್ಮ ಮೇಲೆ ಇರಿಸಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 6ರಂದು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ. ದೂರ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ 10.1 ಕಿ.ಮೀ. ಸಂಜೆ 4ರಿಂದ ರಾತ್ರಿ 10ರ ವರೆಗೆ 26.5 ಕಿ.ಮೀ. ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಸಂಸದ ಪಿ.ಸಿ. ಮೋಹನ್ ತಿಳಿಸಿದರು.
ಸಂಚಾರ ದಟ್ಟಣೆ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರಿಗೆ ತೊಂದರೆಯಾಗದಂತೆ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂಜಾಗ್ರತೆ ವಹಿಸಲಾಗಿದೆ ಎಂದು ತಿಳಿಸಿದರು.