ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಮತ್ತೊಂದು ಬಾರಿ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುತ್ತಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಬಳಿಕ ಕ್ಯಾಪ್ಟನ್ ಅವರು ಒಂದು ತಿಂಗಳೊಳಗೆ ದೆಹಲಿ ಭೇಟಿಯಾಗುತ್ತಿರುವುದು ಇದು ಮೂರನೇ ಬಾರಿ.
ಕ್ಯಾಪ್ಟನ್ ತನ್ನದೇ ಹೊಸ ಪಕ್ಷವನ್ನು ಹುಟ್ಟು ಹಾಕುತ್ತಿರುವ ಬಗ್ಗೆ ತೀವ್ರ ಊಹಾಪೋಹಗಳು ಕೇಳಿ ಬರುತ್ತಿದ್ದು, ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಸೀಟ್ ಹಂಚಿಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದೂ ಹೇಳಲಾಗಿದೆ.
ಮೂಲಗಳ ಪ್ರಕಾರ, ಕೇಂದ್ರ ಸರಕಾರದ ಕೃಷಿ ಕಾಯಿದೆಗಳ ವಿರುದ್ಧ ರೈತರ ಹೋರಾಟದ ವಿಚಾರದಲ್ಲಿ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ಮಾರ್ಗಗಳ ಕುರಿತು ಚರ್ಚಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ವಿರುದ್ಧ ಸಮರ ಸಾರಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ,ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಹೂಡುವುದಾಗಿ ಹೇಳಿದ್ದಾರೆ.