ಮಂಗಳೂರು: ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾ| ಬೃಜೇಶ್ ಚೌಟ ಅವರು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಅವರು ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಪದವಿಯಲ್ಲಿದ್ದಾಗ ಎನ್‌ಸಿಸಿಯಲ್ಲಿ ಮಂಗಳೂರು ವಿ.ವಿ.ಯಲ್ಲಿ “ಬೆಸ್ಟ್ ಕೆಡೆಟ್’ ಎಂದು ಗುರುತಿಸಿದ್ದರು. ದಿಲ್ಲಿ ರಿಪಬ್ಲಿಕ್ ಪರೇಡ್‌ನಲ್ಲಿ ಎನ್‌ಸಿಸಿ ಕೆಡೆಟ್ ಆಗಿ ಪಾಲ್ಗೊಂಡಿದ್ದರು.
UPSC ಆಯೋಜಿಸುವ ಕಂಬೈನ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ (CDSE) ಪರೀಕ್ಷೆ ಹಾಗೂ SSB ಸಂದರ್ಶನದಲ್ಲಿ ತೇರ್ಗಡೆಗೊಂಡು ಚೆನ್ನೈಯಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭೂ ಸೇನೆಯ ಗೋರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಚೌಟ ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 2013ರಲ್ಲಿ ಯುವ ಮೋರ್ಚಾದ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ, 2016-19ರಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು. 2015ರಲ್ಲಿ ಕರಾವಳಿಯ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಹೋರಾಟ ಸಂಘಟಿಸಿದವರಲ್ಲಿ ಮುಂಚೂಣಿಯಲ್ಲಿದ್ದರು.