ಬಳ್ಳಾರಿ: ಉತ್ತರ ಪ್ರದೇಶದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ಮಾಡಿ ಅಪಮಾನ ಮಾಡಿದ ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ ಮಾಡಿ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕಳೆದ ಜ.30 ರಂದು ಹುತಾತ್ಮರ ದಿನಾಚರಣೆ ನಿಮಿತ್ತ ಉತ್ತರ ಪ್ರದೇಶದಲ್ಲಿ ಹಿಂದೂ ಮಹಾಸಭಾದಿಂದ ಅಪಮಾನ ನಡೆದಿದೆ. ಹುತಾತ್ಮರ ಜಯಂತಿಯನ್ನು ಆಚರಿಸಿದ ಹಿಂದೂ ಮಹಾಸಭಾದ ಕಾರ್ಯಕರ್ತರು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ ಮಾಡಿದ್ದಾರೆ. ಜತೆಗೆ ಭಾವಚಿತ್ರಕ್ಕೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಅಮಾನವೀಯವಾಗಿ ಅಪಮಾನ ಮಾಡಿರುವುದು ಖಂಡನೀಯವಾಗಿದೆ. ಅಲ್ಲದೇ, ಮಹಾತ್ಮಗಾಂಧೀಜಿಯವರನ್ನು ಕೊಲೆ ಮಾಡಿದ್ದ ನಾಥುರಾಮ್ ಗೋಡ್ಸೆಯನ್ನು ಮಹಾತ್ಮ ಎಂದು ಜೈಕಾರ ಘೋಷಿಸುವ ಮೂಲಕ ದೇಶದ್ರೋಹಿಗಳಂತೆ ವರ್ತಿಸಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದ್ದು, ಕೂಡಲೇ ಅಲ್ಲಿನ ಸ್ಥಳೀಯ ಬಿಜೆಪಿ ಸರ್ಕಾರ ತಪ್ಪಿತಸ್ಥರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಈ ರೀತಿ ಅಪಮಾನ ಮಾಡುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಮಹಾಸಭಾದವರ ಉಪಟಳ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ರೌಡಿಗಳೇ ರಾಜ್ಯವನ್ನು ಆಳಲಿದ್ದಾರೆ. ಹಿಂದೂ ಮಹಾಸಭಾದ ಉಪಟಳಕ್ಕೆ ಈಗಲೇ ಕಡಿವಾಣ ಬೀಳಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಮಹ್ಮದ್ ರಫೀಕ್, ಕಾರ್ಯಕರ್ತರಾದ ವೆಂಕಟೇಶ್, ಅರುಣ್‌ಕುಮಾರ್, ರವಿ, ಎಲ್.ಮಾರೆಣ್ಣ, ಪದ್ಮಾ, ಸಂಗನಕಲ್ಲು ವಿಜಯಕುಮಾರ್, ಎಂ.ಪ್ರಭಂಜನ್‌ಕುಮಾರ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.