ಬೆಂಗಳೂರು: ನಗರದ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಟೆಂಡರ್ ಶ್ಯೂರ್ ಯೋಜನೆಯಡಿ “ವೈಟ್ ಟಾಂಪಿಂಗ್’ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಮೇಯರ್ ಹಾಗೂ ಸ್ಥಳೀಯ ಶಾಸಕರೊಂದಿಗೆ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ರಸ್ತೆಯನ್ನು ಟೆಂಡರ್ ಶ್ಯೂರ್ ಯೋಜನೆಯಡಿ ಒಂಬತ್ತು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ನಗರ ಯೋಜನಾ ತಜ್ಞ ಡಾ.ನರೇಶ್ ಅವರು ಈ ರಸ್ತೆಯನ್ನು ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದ್ದಾರೆ.
ಅವರ ಸಲಹೆ ಪರಿಗಣಿಸಿ ಈ ರಸ್ತೆಯನ್ನು ವೈಟ್ ಟಾಪಿಂಗ್ ರಸ್ತೆಯನ್ನಾಗಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ವೈಟ್ ಟಾಪಿಂಗ್ ರಸ್ತೆಯಾಗಿ ಅಭಿವೃದ್ಧಿಪಡಿಸಲು ಇನ್ನೂ ಒಂದು ಕೋಟಿ ರೂ. ಹೆಚ್ಚುವರಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದ್ದು, ಒಟ್ಟು ಅಂದಾಜು ವೆಚ್ಚ 10 ಕೋಟಿ ರೂ. ಆಗಲಿದೆ ಎಂದು ಹೇಳಿದರು.
ಮುಂದಿನ ಆರು ತಿಂಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು ಉತ್ತಮ ರಸ್ತೆಯ ಜತೆಗೆ, ವ್ಯವಸ್ಥಿತ ಪಾದಾಚಾರಿ ಮಾರ್ಗ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಹಲವು ಸೌಲಭ್ಯಗಳೊಂದಿಗೆ ರಸ್ತೆಯನ್ನು ಪ್ರತಿಷ್ಠಿತ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು.
ಚರ್ಚ್ ಸ್ಟ್ರೀಟ್ ಅಲ್ಲದೆ, ನಗರದ ಹಲವು ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳಿಗೂ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು. ಮೇಯರ್ ಜಿ.ಪದ್ಮಾವತಿ, ಶಾಸಕ ಎನ್.ಎ.ಹಾರಿಸ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
ಯೋಜನೆಯ ವೈಶಿಷ್ಟಗಳು
715 ಮೀಟರ್ ಉದ್ದದ ರಸ್ತೆಯಲ್ಲಿ 5.50 ಮೀಟರ್ ಅಗಲದ ಸಂಚಾರ ಪಥ, 2.50ರಿಂದ 4 ಮೀಟರ್ ಅಗಲದ ಪಾದಚಾರಿ ಮಾರ್ಗ, 10 ಪಾರ್ಕಿಂಗ್ ಬೇ, 103 ದ್ವಿಚಕ್ರ ವಾಹನ ಪಾರ್ಕಿಂಗ್, 32 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಜತೆಗೆ ರಸ್ತೆಯಲ್ಲಿ 40 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಕೆ ಮಾಡಲಾಗುವುದು.