Advertisement

ಮಕ್ಕಳ ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿ

08:24 AM Jun 04, 2019 | Suhan S |

ಚಿತ್ರದುರ್ಗ: ಐದು ವರ್ಷದೊಳಗಿನ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಎಲ್ಲ ಮಕ್ಕಳಿಗೂ ಒಆರ್‌ಎಸ್‌ ಹಾಗೂ ಜಿಂಕ್‌ ಮಾತ್ರೆಗಳನ್ನು ಆರೋಗ್ಯ ಕೇಂದ್ರಗಳಲ್ಲಿ ಜೂ. 17ರ ವರೆಗೆ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

Advertisement

ತಾಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಒಆರ್‌ಎಸ್‌ ಹಾಗೂ ಜಿಂಕ್‌ ಮಾತ್ರೆ ವಿತರಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳು ಚಾಲನೆ ಹಾಗೂ ಉದ್ಘಾಟನೆಯಾಗುತ್ತವೆ. ಆದರೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸುವುದರಿಂದ ಜನರಲ್ಲಿ ಅರಿವು ಮೂಡುತ್ತದೆ. ಅಲ್ಲದೆ ಉದ್ದೇಶಿತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.

ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಮುಂಜಾಗ್ರತಾ ಕ್ರಮವಾಗಿ ಒಆರ್‌ಎಸ್‌ ಮತ್ತು ಜಿಂಕ್‌ ಮಾತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಆದ್ದರಿಂದ ಎಲ್ಲ ತಾಯಂದಿರೂ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ವಿಶೇಷ ಕೌಂಟರ್‌ನಲ್ಲಿ ಒಆರ್‌ಎಸ್‌ನಿಂದ ತಯಾರಿಸಿದ ದ್ರಾವಣ ಮತ್ತು ಜಿಂಕ್‌ ಮಾತ್ರಗಳನ್ನು ಪಡೆದು ಮಕ್ಕಳಿಗೆ ನೀಡಬೇಕು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಜಾನುಕೊಂಡ ಗ್ರಾಮ ಮತ್ತು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ತಾತ್ಕಾಲಿಕವಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಶಾಂತಿಸಾಗರದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದರು.

Advertisement

ಮಳೆಗಾಲ ಆರಂಭವಾಗಿದ್ದು ಮನೆಗಳಲ್ಲಿ ಮಳೆ ನೀರನ್ನು ಸಂಗ್ರಹ ಮಾಡಿಕೊಳ್ಳಲು ಜನರು ಮುಂದಾಗಬೇಕು. ಜಲ ಮರುಪೂರಣ ಮಾಡುವ ಮೂಲಕ ಜಲಸಂರಕ್ಷಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಲು ಅತಿಸಾರ ಭೇದಿ ನಿಯಂತ್ರಣ ಮಾಡಬೇಕಾಗಿದೆ. ಆದ್ದರಿಂದ ಅತಿಸಾರ ಭೇದಿ ನಿಯಂತ್ರಣದ ಸುಲಭ ವಿಧಾನದ ಬಗ್ಗೆ ಮತ್ತು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೈ ಶುಚಿತ್ವದ ಕುರಿತು ಇದೇ ವೇಳೆ ಜಾಗೃತಿ ಮೂಡಿಸಲಾಗುತ್ತಿದೆ. ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಒಆರ್‌ಎಸ್‌ ಮತ್ತು ಜಿಂಕ್‌ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸಮಿತಿಗಳಿಂದಲೂ ಜಾಗೃತಿ ಮೂಡಿಸಲಾಗುತ್ತದೆ. 25ಕ್ಕೂ ಹೆಚ್ಚು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಇದ್ದು ಇವುಗಳ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ. ಜನನದಿಂದ 9 ತಿಂಗಳವರೆಗೆ ಎಲ್ಲಾ ಮಕ್ಕಳಿಗೂ 9 ಲಸಿಕೆ ಹಾಕಿಸಬೇಕು. ಈ ಲಸಿಕೆಗಳಿಂದ ಯಾವುದೇ ಮಕ್ಕಳು ಬಿಟ್ಟುಹೋಗದಂತೆ ಆಶಾ, ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆ ಮನೆ ಸಮೀಕ್ಷೆ ಮಾಡಿಸಲಾಗುತ್ತದೆ ಎಂದರು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಸುರೇಶ್‌, ಜಿಲ್ಲಾ ಸರ್ವೇಕ್ಷಣಾಕಾರಿ ಡಾ| ರೇಣುಪ್ರಸಾದ್‌, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅಕ್ಷತಾ, ವಾರ್ತಾಧಿಕಾರಿ ಧನಂಜಯ, ಗ್ರಾಪಂ ಸದಸ್ಯರಾದ ನಿಜಲಿಂಗಪ್ಪ, ಆಸ್ಪತ್ರೆ ಕಟ್ಟಡಕ್ಕೆ ಜಮೀನು ದಾನ ಮಾಡಿದ ಪಂಡರಹಳ್ಳಿ ಹೊನ್ನಪ್ಪ, ಪಂಚಾÀಯತ್‌ ಅಭಿವೃದ್ಧಿ ಅಧಿಕಾರಿ ಸಮೀವುಲ್ಲಾ ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್‌ ನಿರೂಪಿಸಿದರು. ಆರೋಗ್ಯ ಶಿಕ್ಷಣ ತರಬೇತುದಾರ ಮೂಗಪ್ಪ ಮತ್ತು ಆಶಾ ಕಾರ್ಯಕರ್ತೆಯರು ಕೈ ಶುಚಿತ್ವದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next