ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ಮತ್ತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿದೆ.
ಅರ್ಜಿದಾರರ ವಿರುದ್ಧ ಮಾಡಲಾಗಿರುವ ಆರೋಪ “ಅಸಂಜ್ಞೆಯ ಅಪರಾಧ’ದ ಸ್ವರೂಪದ್ದಾಗಿದ್ದು, ಇಂತಹ ಪ್ರಕರಣಗಳಲ್ಲಿ ಪಾಲಿಸಬೇಕಾದ ಕಾನೂನು ಪ್ರಕ್ರಿಯೆಗಳನ್ನು ಪಾಲಿಸಲಾಗಿಲ್ಲ. ಅಷ್ಟಕ್ಕೂ, ಈ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಳ್ಳಲಾಗಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿದೆ.
ಹಾಗಾಗಿ, ಪ್ರಕರಣದ ಸಂಬಂಧ ಸಲ್ಲಿಸಲಾದ ದೂರು, ಪೊಲೀಸರು ದಾಖಲಿಸಿಕೊಂಡಿರುವ ಎಫ್ಐಆರ್ ಹಾಗೂ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಬೇಕು ಎಂದು ಕೋರಲಾಗಿತ್ತು. ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ಪ್ರಕರಣವೇನು?: 2018ರ ಏಪ್ರಿಲ್ 15ರಂದು ಬಜಪೆಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ತುಳು ಭಾಷೆಯಲ್ಲಿ ಭಾಷಣ ಮಾಡಿದ್ದರು. ಇದು ಪ್ರಚೋದನಕಾರಿ ಭಾಷಣ, ಇದರಿಂದಾಗಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಕ್ಷೇಪಿಸಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಗಿರೀಶ್ ಶೆಟ್ಟಿಗಾರ್ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ನಡೆಸಿದ್ದ ಬಜಪೆ ಪೊಲೀಸರು, ಮಂಗಳೂರು ಜೆಎಂಎಫ್ಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಅದನ್ನು ರದ್ದುಪಡಿಸಿದೆ.