Advertisement

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ನಳಿನ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದು

10:23 PM Jan 10, 2022 | Team Udayavani |

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ ಮಂಗಳೂರು ಸಂಸದ ನಳಿನ್‌ ಕುಮಾರ್‌ ಕಟೀಲು ವಿರುದ್ಧ ಮಂಗಳೂರು ಪೂರ್ವ ಠಾಣೆ ಪೋಲಿಸರು ದಾಖಲಿಸಿದ್ದ ಎಫ್ಐಆರ್‌ ಹಾಗೂ ಮಂಗಳೂರಿನ 2ನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ 2017ರಲ್ಲಿ ನಳಿನ್‌ ಕುಮಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಫ್ಐಆರ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ. ಇದರಿಂದ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದ ಸಂಸದರು ನಿರಾಳರಾಗಿದ್ದಾರೆ. ನಳಿನ್‌ ಪರವಾಗಿ ಪವನಚಂದ್ರ ಶೆಟ್ಟಿ ವಾದಿಸಿದ್ದರು.

ಪ್ರಕರಣದಲ್ಲಿ ಆರೋಪ ರುಜುವಾತುಪಡಿಸುವಂತಹ ಅಂಶಗಳಿಲ್ಲ. ಅಲ್ಲದೆ, ಸಂವಿಧಾನದ ಪರಿಚ್ಛೇದ 105 ಪ್ರಕಾರ ಸರಕಾರದ ಆಡಳಿತ ಯಂತ್ರ ಅಥವಾ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂದು ಗೊತ್ತಾದರೆ ಜನಪ್ರತಿನಿಧಿಗಳು (ಸಂಸದರು) ಮಧ್ಯಪ್ರವೇಶಿಸುವ ಅಧಿಕಾರ ಹೊಂದಿದ್ದಾರೆ. ಆ ಕರ್ತವ್ಯವನ್ನು ಸಂಸದರು ನಿಭಾಯಿಸಿದ್ದಾರೆ. ಜನರನ್ನು ಪ್ರಚೋದಿಸುವ ಅಥವಾ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಅವರದ್ದಾಗಿರಲಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಎಫ್ಐಆರ್‌ ಮತ್ತು ವಿಚಾರಣೆಯನ್ನು ರದ್ದುಪಡಿಸಿದೆ. ಜತೆಗೆ ಜೆಎಂಎಫ್ಸಿ ನ್ಯಾಯಾಲಯ ತಿರಿಸ್ಕರಿಸಿದ್ದ ಬಿ ರಿಪೋರ್ಟ್‌ ಅನ್ನು ಹೈಕೋರ್ಟ್‌ ಅಂಗೀಕರಿಸಿದೆ.

ಇದನ್ನೂ ಓದಿ:2021 ಜುಲೈ-ಸೆಪ್ಟೆಂಬರ್‌ನಲ್ಲಿ 3.10 ಕೋಟಿ ನವೋದ್ಯೋಗ : ಕೇಂದ್ರ ಕಾರ್ಮಿಕ ಸಚಿವಾಲಯ ಮಾಹಿತಿ

ಪ್ರಕರಣವೇನು?
ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರಂದು ಸೆ.7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್‌ ರ್ಯಾಲಿ ಹಮ್ಮಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣೆಯ ಇನ್‌ಸ್ಪೆಕ್ಟರ್‌ ಬಂಧಿಸಿದ್ದರು.

Advertisement

ಈ ಕುರಿತು ಮಾಹಿತಿ ಪಡೆದಿದ್ದ ನಳಿನ್‌, ಅಂದು ಮಧ್ಯಾಹ್ನ 3 ಗಂಟೆಗೆ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತಮಗೆ ತೋರಿಸುವಂತೆ ಇನ್‌ಸ್ಪೆಕ್ಟರ್‌ ಮಾರುತಿ ಜಿ. ನಾಯಕ್‌ ಅವರನ್ನು ಕೇಳಿದ್ದರು. ಆಗ ಇನ್ಸ್‌ಪೆಕ್ಟರ್‌ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ನಳಿನ್‌ ವಿರುದ್ಧ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಠಾಣಾಧಿಕಾರಿಗೆ ದೂರು ನೀಡಿದ್ದರು. ಬಳಿಕ ಎಫ್ಐಆರ್‌ ದಾಖಲಿಸಲಾಗಿತ್ತು. ಪ್ರಕರಣ ಮಂಗಳೂರು 2ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್ಸಿ ಕೋರ್ಟ್‌ ತಲುಪಿತ್ತು.ಈ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ನಳಿನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next