ಶಿವಮೊಗ್ಗ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ ಪ್ರಕರಣ ದಾಖಲಿಸಿರುವುದನ್ನು ವಿಧಾನ ಪರಿಷತ್ ಶಾಸಕ ಡಾ| ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ. ಪ್ರತಿಭಟನೆ ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ.
ಸರಕಾರ ಬಂದು ಕೇವಲ 16 ತಿಂಗಳೊಳಗೆ ಸಾಲು ಸಾಲು ಭ್ರಷ್ಟಾಚಾರ ಮಾಡಿ ನಾಡಿನ ಜನತೆಯ ಆಕ್ರೋಶಕ್ಕೆ ಕಾರಣರಾಗಿರುವ ಜನವಿರೋಧಿ ಕಾಂಗ್ರೆಸ್ ಸರಕಾರ, ಇದೀಗ ಒಬ್ಬ ಪ್ರಾಮಾಣಿಕ ಶಿಕ್ಷಕನ ಮೇಲೆ ಗದಾಪ್ರಹಾರ ಮಾಡುತ್ತಿದೆ. ಅದನ್ನು ಪ್ರಶ್ನಿಸಿಲು ಹೋದರೆ ಎಫ್‌ಐಆರ್ ದಾಖಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ ಕೇಸ್ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಕ್ಕೆ ಅವಕಾಶವಿಲ್ಲ.
ಶಿಕ್ಷಕರ ಸೇವೆ, ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರವೇ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಬಳಿಕ ಮತೀಯವಾದಿಗಳ ಒತ್ತಡಕ್ಕೆ ಮಣಿದು ಪ್ರಶಸ್ತಿಯನ್ನು ತಡೆ ಹಿಡಿಯಲಾಗಿದೆ ಎಂದರು.