ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಅಧಿಕಾರಿಗಳು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದು, ಶುಕ್ರವಾರ ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದ್ದು, ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪಾದನೆ ಮಾಡುತ್ತಿದ್ದ ಎರಡು ಕಾರ್ಖಾನೆಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಇಲ್ಲಿನ ಕಪನೂರ ಕೈಗಾರಿಕೆ ಪ್ರದೇಶದಲ್ಲಿ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪಾದನಾ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ಎರಡು ಕಾರ್ಖಾನೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆಯಲ್ಲಿ ತೊಡಗಿರುವುದು ಬಯಲಿಗೆ ಬಂದಿದೆ. ಅಲ್ಲದೇ, 170 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಸ್ತುಗಳು ಪತ್ತೆಯಾಗಿವೆ.
ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪಾದನೆ ಹಿನ್ನೆಲೆಯಲ್ಲಿ ಈ ಹಿಂದೆಯೂ ಎರಡು ಕಾರ್ಖಾನೆಗಳ ಮೇಲೆ ದಾಳಿ ಮಾಡಿ, ಸೀಲ್ ಹಾಕಲಾಗಿತ್ತು. ಆದರೆ, ಸೀಲ್ ತೆಗೆದು ಈಗ ಮತ್ತೆ ಪ್ಲಾಸ್ಟಿಕ್ ಉತ್ಪಾದನೆಯಲ್ಲಿ ತೊಡಗಿದ್ದರು. ಆದ್ದರಿಂದ ಎರಡೂ ಕಾರ್ಖಾನೆಗಳ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಾಲಿಕೆ ಆಯುಕ್ತ ಸ್ನೇಹಲ್ ತಿಳಿಸಿದ್ದಾರೆ.
ಇತ್ತ, ಗಂಜ್ ಪ್ರದೇಶದ ಗೋದಾಮುಗಳಲ್ಲಿ ಪ್ಲಾಸ್ಟಿಕ್ ವಸ್ತುಗಳು ಸಂಗ್ರಹ ಮಾಹಿತಿ ಹಿನ್ನೆಲೆಯಲ್ಲಿ ಉಪ ಆಯುಕ್ತ ಆರ್.ಪಿ.ಜಾಧವ್ ನೇತೃತ್ವದಲ್ಲಿ ದಾಳಿ ಮಾಡಿ ಅಂದಾಜು ಐದು ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡು ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಪ್ಲಾಸ್ಟಿಕ್ ಲೋಟ, ತಟ್ಟೆಗಳು ಹಾಗೂ ವಸ್ತುಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಿ, ಎರಡು ಟ್ರಕ್ ಗಳಲ್ಲಿ ತುಂಬಿಸಿಟ್ಟಿದ್ದ 145 ರಟ್ಟಿನ ಡಬ್ಬಗಳನ್ನು ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.