ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ಡಿ.16ಕ್ಕೆ ನಿಗದಿಪಡಿಸಿದೆ.
ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕೆಲ ಕಸಾಯಿ ಖಾನೆ ಮಾಲೀಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.
ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಸೆ.8ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂತಿಮ ವಿಚಾರಣೆಗೆ ನ.5ರಂದು ದಿನಾಂಕ ನಿಗದಿಪಡಿಸುವುದಾಗಿ ಹೇಳಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದನ್ನೂ ಓದಿ:ವಾಕಿಂಗ್ ಹೋಗುತ್ತಿದ್ದಾಗ ನಟಿಗೆ ಹಲ್ಲೆ; ಮೊಬೈಲ್ ಕಿತ್ತುಕೊಂಡು ಪರಾರಿ
ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಬಾಂಬೆ ಮತ್ತು ಗುಜರಾತ್ ಹೈಕೋರ್ಟ್‌ಗಳು ನೀಡಿರುವ ತೀರ್ಪುಗಳು ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗೆ ಪೂರಕವಾಗಿದೆ. ಅಲ್ಲದೇ ಕಾಯ್ದೆಯನ್ನು ಬೆಂಬಲಿಸಿ ಕೆಲ ಸಂಸ್ಥೆಗಳು ಮಧ್ಯಂತರ ಅರ್ಜಿ ಸಲ್ಲಿಸಿವೆ. ಅವರ ವಾದವನ್ನೂ ಕೇಳಬೇಕಾಗಿದೆ. ಮೂಲ ಅರ್ಜಿಗಳು ಮತ್ತು ಮಧ್ಯಂತರ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಬಹುದು ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.