ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಶನಿವಾರ ಆದೇಶಿಸಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಥಳ ಪರಿಶೀನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಭೀಕರ ದುರಂತ. ಈಗಾಗಲೇ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆಯಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖೆಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುವುದು ನಮ್ಮ ಆದ್ಯತೆಯಾಗಿದೆ. ಜಿಲ್ಲಾಡಳಿತದ ಅನುಮೋದನೆಯ ನಂತರ ಪುನಃಸ್ಥಾಪನೆ ಕಾರ್ಯವನ್ನೂ ಆರಂಭಿಸಲಾಗುತ್ತದೆ. ಘಟನೆ ಸಂಬಂಧ ವಿವರವಾದ ಉನ್ನತ ಮಟ್ಟದ ತನಿಖೆಯನ್ನು ಕೈಗೊಳ್ಳಲಾಗುತ್ತಿದೆ. ಹಾಗೆಯೇ ರೈಲು ಸುರಕ್ಷತಾ ಆಯುಕ್ತರಿಂದ ಸ್ವತಂತ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.