ನವದೆಹಲಿ:ತಮಿಳುನಾಡಿನಲ್ಲಿ ರಾಜಕೀಯ ಬಿಕ್ಕಟ್ಟು ಶಮನಗೊಳ್ಳುತ್ತಿದ್ದಂತೆಯೇ ಕಾವೇರಿ ನದಿ ನೀರಿಗಾಗಿ ತಮಿಳುನಾಡು ಮತ್ತೆ ಪಟ್ಟು ಹಿಡಿದಿದೆ. ಶ್ರಮಶಕ್ತಿ ಭವನದಲ್ಲಿ ಶುಕ್ರವಾರ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ, ಕರ್ನಾಟಕ ಬಾಕಿ ಉಳಿದಿರುವ ನೀರನ್ನು ಬಿಡಬೇಕೆಂದು ತಮಿಳುನಾಡು ಅಧಿಕಾರಿಗಳು ಪಟ್ಟು ಹಿಡಿದಿದ್ದರು. ಆದರೆ ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕದ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಇಂದು ಶ್ರಮಶಕ್ತಿ ಭವನದಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆದಿತ್ತು. ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳದ ಅಧಿಕಾರಿಗಳು ಭಾಗವಹಿಸಿದ್ದರು. ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಕೂಡ ಹಾಜರಿದ್ದರು.
ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿ, ಕರ್ನಾಟಕ ಸುಪ್ರೀಂಕೋರ್ಟ್ ಆದೇಶದಂತೆ ಈವರೆಗೆ 13 ಟಿಎಂಸಿ ನೀರು ಬಿಡಬೇಕಾಗಿತ್ತು. ಹಾಗಾಗಿ ಕೂಡಲೇ ಬಾಕಿ ಉಳಿದ ನೀರನ್ನು ಬಿಡಬೇಕೆಂದು ಪಟ್ಟು ಹಿಡಿದಿದ್ದರು. ಈ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿಗಳು ಮಾತನಾಡಿ, ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ತುಂಬಾ ನೀರಿನ ಕೊರತೆ ಇದ್ದಿರುವುದಾಗಿ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ನಿಟ್ಟಿನಲ್ಲಿ 2016ರ ಡಿಸೆಂಬರ್ 14ರಂದು ಸುಪ್ರೀಂಕೋರ್ಟ್ ತಮಿಳುನಾಡಿಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನೀಡಿದ್ದ ಆದೇಶದ ಮಾರ್ಪಾಡು ಕೋರಿ ಅರ್ಜಿ ಸಲ್ಲಿಸುವ ಬಗ್ಗೆ ಕರ್ನಾಟಕ ಚಿಂತನೆ ನಡೆಸಿದೆ.
ಮೇಕೆದಾಟು ಯೋಜನೆಗೂ ಕ್ಯಾತೆ:
ಸಭೆಯಲ್ಲಿ ಕರ್ನಾಟಕ ಸರ್ಕಾರದ ಮೇಕೆ ದಾಟು ಡ್ಯಾಂ ನಿರ್ಮಾಣ ಯೋಜನೆಗೂ ತಮಿಳುನಾಡಿನ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ. ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ತಮಿಳುನಾಡು ಪರ ಅಧಿಕಾರಿಗಳು ವಾದಿಸಿದ್ದಾರೆ. ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ, ಮೇಕೆದಾಟು ಯೋಜನೆ ನಿಲ್ಲಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಪ್ರತಿವಾದಿಸಿದ್ದಾರೆ.