ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ ತಮಿಳುನಾಡಿಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತ ಕಾವೇರಿ ಐತೀರ್ಪು ಪ್ರಶ್ನಿಸಿ ನಾಲ್ಕು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ತೀರ್ಪು ನೀಡಿತ್ತು.
ಫೆಬ್ರುವರಿ 7ರಿಂದ ನಾಲ್ಕು ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ಇತ್ಯರ್ಥವಾಗುವವರೆಗೂ ಕರ್ನಾಟಕ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಆದೇಶ ನೀಡಿದೆ.
ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಸೇರಿದಂತೆ 4 ರಾಜ್ಯಗಳು ಸಲ್ಲಿಸಿರುವ ಮೂಲ ಅರ್ಜಿಯ ವಿಚಾರಣೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಯೋಗ್ಯ ಅಲ್ಲ ಎಂಬ ಕೇಂದ್ರ ಸರ್ಕಾರದ ವಾದಕ್ಕೆ ಪುದುಚೇರಿ ಬೆಂಬಲ ನೀಡಿದರೆ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸರ್ಕಾರ ಅರ್ಜಿಗಳು ವಿಚಾರಣೆಗೆ ಅರ್ಹ ಎಂದು ವಾದ ಮಂಡಿಸಿದ್ದವು.
ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ನಾಲ್ಕು ರಾಜ್ಯಗಳ ವಾದ, ಪ್ರತಿವಾದ ಆಲಿಸಿದ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿ ವಿಚಾರಣೆಗೆ ಯೋಗ್ಯ ಎಂದು ತೀರ್ಪು ನೀಡಿತ್ತು.