ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ಕುರಿತಂತೆ ಚರ್ಚಿಸಲು ಸರ್ಕಾರ ಮಂಗಳವಾರ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಮುಖಂಡರ ಸರ್ವಪಕ್ಷಗಳ ಸಭೆ ಕರೆದಿದೆ.
ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ತಜ್ಞರ ಸಮಿತಿಗೆ ಒಪ್ಪಿಗೆ ನೀಡಬೇಕೇ? ಬೇಡವೇ ಎಂಬ ಕುರಿತು ಎಲ್ಲಾ ಪಕ್ಷಗಳ ಅಭಿಪ್ರಾಯ ಪಡೆದು ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯಿಸುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಉಭಯ ಸದನಗಳ ಪ್ರತಿಪಕ್ಷ ನಾಯಕರು, ಇತರೆ ರಾಜಕೀಯ ಪಕ್ಷಗಳ ಮುಖಂಡರು, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಪ್ರತಿ ವರ್ಷ ತಗಾದೆ ಉಂಟಾಗಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಹಂಚಿಕೆ ವಿವಾದ ಪರಿಹರಿಸುವ ಸಂಬಂಧ ತಜ್ಞರ ಸಮಿತಿಯೊಂದನ್ನು ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಕಾವೇರಿ ಕೊಳ್ಳದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪಾಂಡಿಚೇರಿಗೆ ಕೇಂದ್ರ ಸರಕಾರ ಪತ್ರ ಬರೆದಿದೆ.ತಜ್ಞರ ಸಮಿತಿ ರಚನೆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಸೂಚಿಸಿತ್ತು.
ಕಾವೇರಿ ನೀರು ಹಂಚಿಕೆ ಅದರಲ್ಲೂ ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯೊಂದನ್ನು ನೇಮಿಸಿ ಆ ಮೂಲಕ ಕರ್ನಾಟಕ – ತಮಿಳುನಾಡು ರಾಜ್ಯಗಳ ನಡುವಿನ ವಿವಾದ ಬಗೆಹರಿಸಲು ಕೇಂದ್ರ ಮುಂದಾಗಿದೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ನೀಡುವಾಗ ತಜ್ಞರ ವರದಿ ಇದ್ದರೆ ಎರಡೂ ರಾಜ್ಯಗಳಿಗೆ ಅನ್ಯಾಯವಾಗದಂತೆ ಗಮನವಹಿಸಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.
ಸಮಿತಿಯಲ್ಲಿ ಕೇಂದ್ರ ಸರ್ಕಾರ ನೇಮಿಸಿದ ತಜ್ಞರ ಜತೆಗೆ ಕಾವೇರಿ ಕೊಳ್ಳದ ಮೂರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪಾಂಡಿಚೇರಿ ನೇಮಿಸಿದ ತಜ್ಞರು ಇರುತ್ತಾರೆ. ಆದರೆ, ತಜ್ಞರ ಸಮಿತಿ ನೇಮಕಕ್ಕೆ ಅವರ ಒಪ್ಪಿಗೆ ಬೇಕು. ಹೀಗಾಗಿ ಕೇಂದ್ರ ಸರ್ಕಾರ ಸಮಿತಿ ರಚನೆ ಕುರಿತು ಆಯಾ ರಾಜ್ಯ ಸರಕಾರಗಳ ಅಭಿಪ್ರಾಯ ಕೇಳಿದೆ.