Advertisement

CBI ಅನುಮತಿ ವಾಪಸ್‌: ಹೈಕೋರ್ಟ್‌ಗೆ ಯತ್ನಾಳ್‌ ತಕರಾರು ಅರ್ಜಿ

09:03 PM Dec 06, 2023 | Team Udayavani |

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್‌ ಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಈ ವಿಚಾರವಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಾದ ಆಲಿಸಿದ ನ್ಯಾಯಪೀಠ, ಆರ್ಜಿದಾರರು ಈ ಪ್ರಕರಣದಲ್ಲಿ ಸಂತ್ರಸ್ತರೇ? ಅದೇ ರೀತಿ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು “ನಿಮ್ಮ ಹಕ್ಕುದಾರಿಕೆ’ (ಲೋಕಸ್‌ ಸ್ಟಾಂಡಿ) ಏನಿದೆ ಅನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ವೆಂಕಟೇಶ್‌ ದಳವಾಯಿ ವಾದ ಮಂಡಿಸಿದರು.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್‌ ಪಡೆದು ನವೆಂಬರ್‌ 28ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಅನೂರ್ಜಿತ ಮತ್ತು ಕಾನೂನು ಬಾಹಿರವೆಂದು ಘೋಷಿಸಬೇಕು. ಅದೇ ರೀತಿ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಅಲ್ಲದೆ, ಅರ್ಜಿಯ ವಿಚಾರಣೆ ಮುಗಿಯುವ ತನಕ ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್‌ ಪಡೆದುಕೊಂಡು ನ.28ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಲಾಗಿದೆ.

Advertisement

ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಮೇಲ್ಮನವಿಗೆ ಯತ್ನಾಳ್‌ ಮಧ್ಯಪ್ರವೇಶ ಅರ್ಜಿ ಸಲ್ಲಿಸಿದ್ದರು.ಆದರೆ, ಅದನ್ನು ಪರಿಗಣಿಸಲು ವಿಭಾಗೀಯ ನ್ಯಾಯಪೀಠ ನಿರಾಕರಿಸಿತ್ತು. ಅದರಂತೆ ಈಗ ಯತ್ನಾಳ್‌ ಸರ್ಕಾರದ ನಿರ್ಧಾರದ ವಿರುದ್ಧ ಹೊಸದಾಗಿ ತಕರಾರು ಅರ್ಜಿ ಸಲ್ಲಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next