ಬೆಂಗಳೂರು: ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಸಿಬಿಐ ಕೋರ್ಟ್ ದೋಷಮುಕ್ತ ಗೊಳಿಸಿ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶ ಸಿ.ಬಿ.ಸಂತೋಷ್ ಅವರು ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ತನಿಖೆ ನಡೆಸಿದ ಬಳಿಕ ಸಿಬಿಐ ತನಿಖೆ ನಡೆಸಿತ್ತು. ಸಂತೋಷ್ ರಾವ್ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಈ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು.
ಒಮ್ಮೆ ಸಿಬಿಐ ತನಿಖೆ ನಡೆಸಿರುವ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ, 2012ರ ಅ.9 ರಂದು ಕಾಣೆಯಾಗಿದ್ದಳು. ಆ ಕುರಿತು ಆಕೆಯ ತಂದೆ ಚಂದ್ರಪ್ಪಗೌಡ ಅದೇ ದಿನ ಬೆಳ್ತಂಗಡಿ ಪೋಲೀಸರಿಗೆ ದೂರು ನೀಡಿದ್ದರು. ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ಸಿಐಡಿಗೆ ತನಿಖೆಯನ್ನು ವರ್ಗಾಯಿಸಲಾಗಿತ್ತು.ಘಟನೆ ಬಳಿಕ ದೊಡ್ಡ ಮಟ್ಟದ ಹೋರಾಟ ನಡೆಯಿತು. ಅದರ ಪರಿಣಾಮ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು.