ಬೆಂಗಳೂರು: ರಸ್ತೆ, ಸೇತುವೆ, ಕಟ್ಟಡಗಳ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಯಾವುದೇ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಕೆ ನೀಡಿದರು.
ಸಭೆಯ ನಂತರ ಮಾತನಾಡಿದ ಅವರು, ಗುಣಮಟ್ಟ ಭರವಸೆ ಅಧಿಕಾರಿಗಳು ಕಾಮಗಾರಿಗಳ ಪರಿವೀಕ್ಷಣೆ ನಡೆಸಿ ಎಲ್ಲ ಯೋಜನೆಗಳ ಗುಣಮಟ್ಟ ಪರಿಶೀಲಿಸಿದ ಬಳಿಕವೇ ಎನ್‌ಒಸಿ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಸ್ತೆ ಸುರಕ್ಷತೆ ಕಾಮಗಾರಿಗಳು ಹಾಗೂ ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳ ಜಂಕ್ಷನ್‌ಗಳ ಅಭಿವೃದ್ಧಿಯನ್ನು ಆದ್ಯತೆ ಮೇಲೆ ಕೈಗೊಂಡು ಅಪಘಾತಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನಿರ್ದೇಶನ ಮಾಡಲಾಗಿದೆ ಎಂದು ತಿಳಿಸಿದರು.
ಕೆಆರ್‌ಡಿಸಿಎಲ್ ವತಿಯಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಏಳು ಸಾವಿರ ಮರ ತೆರವುಗೊಳಿಸುವ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವಿಗೆ ಕ್ರಮಕಗೊಂಡು ಭೂಮಿ ಲಭ್ಯ ಇರುವ ಕಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ ಎಂದರು.
ಕೇಂದ್ರ ಸರ್ಕಾರದಿಂದ ಅನುಮೋದನೆಯಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಲಾಗಿದೆ. ಕೇಂದ್ರದಲ್ಲಿ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.