ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾತ್ರೋರಾತ್ರಿ ಹಲವೆಡೆ ದಾಳಿ ನಡೆಸಿದ್ದು, 60 ಮಂದಿಯನ್ನು ವಶಪಡಿಸಿಕೊಂಡಿದ್ದಾರೆ.
ಅಖಂಡ ಶ್ರೀನಿವಾಸ ಮೂರ್ತಿ ಮನೆ, ಡಿಜೆಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಭೆಯ ವಿಡಿಯೋ ಸಾಕ್ಷ್ಯಗಳ ಆಧಾರದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಧ್ಯರಾತ್ರಿಯ ನಂತರ ಮನೆಮನೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 60 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಕಾರ್ಪೋರೇಟ್ ಪತಿ ಅಂದರ್: ಗಲಭೆಗೆ ಸಂಬಂಧಿಸಿದಂತೆ ಕಾರ್ಪೋರೇಟರ್ ಇರ್ಷಾದ್ ಬೇಗಂ ರ ಪತಿ ಕಲೀಂ ಪಾಷಾನನ್ನು ಬಂಧಿಸಲಾಗಿದೆ. ಘಟನೆಗೆ ಮೊದಲು ಈತ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಂದಿದ್ದ ಎಂದು ವರದಿಯಾಗಿದೆ.
ಮಂಗಳವಾರ ರಾತ್ರಿ ನಡೆದ ಈ ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 206 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎರಡು ಠಾಣೆಗಳಲ್ಲಿ 12 ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಎರಡು ಪ್ರಕರಣಗಳನ್ನು ಸಿಸಿಬಿಗೆ ವಹಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ದಾಳಿ ಪ್ರಕರಣ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ! ಕಾರಣವೇನು ಗೊತ್ತಾ?
ದೂರು ನೀಡಲಿರುವ ಅಖಂಡ ಶ್ರೀನಿವಾಸ ಮೂರ್ತಿ: ಗಲಭೆ ಸಂಬಂಧ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಇಂದು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿರುವರು. ಆಸ್ತಿಹಾನಿ, ಕೊಲೆ ಯತ್ನ ಮಾಡಿದ್ದಾರೆಂದು ಇಂದು ದೂರು ನೀಡಲಿದ್ದಾರೆ ಎಂದು ವರದಿಯಾಗಿದೆ.