Advertisement

ಯುವತಿಯೇನು ವಿಜಯ್‌ ಮಲ್ಯನಾ…ನೀರವ್‌ ಮೋದಿಯಾ.? : ಸಿದ್ದರಾಮಯ್ಯ ಪ್ರಶ್ನೆ

12:00 AM Mar 29, 2021 | Team Udayavani |

ಬೆಂಗಳೂರು: ಸಿ.ಡಿ. ಪ್ರಕರಣದ ಯುವತಿಯ ಕಾನೂನು ಬದ್ಧವಾದ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಆಕೆ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ವೀಡಿಯೋ ಬಿಡುಗಡೆ ಮಾಡುತ್ತಿದ್ದಾಳೆ. ವಕೀಲರ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ. ತಂದೆ-ತಾಯಿ ಜತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಆಕೆಯೇನು ವಿಜಯ್‌ ಮಲ್ಯನಾ, ನೀರವ್‌ ಮೋದಿಯಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ಪೊಲೀಸರ ವೈಫ‌ಲ್ಯ
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಿ.ಡಿ. ಪ್ರಕರಣದಿಂದಾಗಿ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರಕಾರ ಮತ್ತು ಪೊಲೀಸರ ವೈಫ‌ಲ್ಯವೇ ಕಾರಣ. ಪ್ರಕರಣ ಬಯಲಿಗೆ ಬಂದು 26 ದಿನಗಳು ಕಳೆದರೂ ಸಂತ್ರಸ್ತ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್‌ ಮೋದಿಯೋ? ರಾಜ್ಯದ ಪೊಲೀಸ್‌ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ ಎಂದೂ ಟೀಕಿಸಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಮಾಧ್ಯಮಗಳಲ್ಲಿ ಪ್ರಕಟ ಅಥವಾ ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇದ್ದಂತಿಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next